ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯದಂತ ಭಾರೀ ಸಂಚಲನವನ್ನು ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಿಬಿಐಗೆ ವಹಿಸಲಾಗಿದೆ. ಇದರ ನಡುವೆಯೇ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದ್ದ, ವೈದ್ಯ ಶವವಾಗಿ ಪತ್ತೆಯಾಗಿದ್ದಾರೆ. ಡಾ. ಸತೀಶ್ ಕಾರಿನಲ್ಲಿಯೇ ಶವವಾಗಿ ಸಿಕ್ಕಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಶವವಾಗಿ ಸಿಕ್ಕಿದ್ದಾರೆ. ಡಾ. ಸತೀಶ್ ಮಂಡ್ಯ ಜಿಲ್ಲೆಯ ಹುಣಸೂರು ತಾಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಆದರೆ ಇದೀಗ ವಿಷವನ್ನು ಇಂಜೆಕ್ಷನ್ ಮೂಲಕ ಚುಚ್ಚುವ ಮೂಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯ ಮೂಲಕ ತಿಳಿಯಲಾಗಿದೆ ಎನ್ನಲಾಗಿದೆ.
ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಡಾ.ಸತೀಶ್ ಹೆಸರು ಕೂಡ ಕೇಳಿ ಬಂದಿತ್ತು. ಆಲೆಮನೆಗೆ ಪರಿಶೀಲನೆಗೆ ಹೋದಾಗಲೂ ಸ್ಥಳೀಯರು ಸತೀಶ್ ಹೆಸರು ಹೇಳಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕರ್ತವ್ಯ ಲೋಪದಡಿ ಡಾ.ರಾಜೇಶ್ವರಿ ಹಾಗೂ ಡಾ.ರವಿ ಅವರನ್ನು ಅಮಾನತು ಮಾಡಿ ಆರೋಗ್ಯ ಸಚಿವರು ಆದೇಶ ಹೊರಡಿಸಿದ್ದರು. ಸತೀಶ್ ಅವರ ಹೆಸರು ಕೇಳಿ ಬಂದ ಬೆನ್ನಲ್ಲೇ ಅವರನ್ನು ಕರೆದು ವಿಚಾರಣೆ ನಡೆಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಸತೀಶ್ ಸಾವನ್ನಪ್ಪಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.