ನವದೆಹಲಿ: ದೆಹಲಿ ಪ್ರವಾಸದಲ್ಲಿಯೇ ಇರುವ ಸಿಎಂ ಸಿದ್ದರಾಮಯ್ಯ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ ತಾನೇ ಪಿಎಂ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯದ ಬರದ ಸಮಸ್ಯೆಯನ್ನು ಮನದಟ್ಟು ಮಾಡಿದ್ದರು. ಇದೀಗ ಅಮಿತ್ ಅವರ ಜೊತೆಗೆ ಬರದ ಪರಿಹಾರದೊಂದಿಗೆ ರೈತರ ಸಮಸ್ಯೆಗಳನ್ನು ತಿಳಿಸಿದ್ದಾರೆ.
ಬರ ಪರಿಹಾರದ ಮೊದಲ ಮನವಿ ಸಲ್ಲಿಸಿ, ಈಗಾಗಲೇ ಮೂರು ತಿಂಗಳಾಗಿದೆ. ರೈತರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಬೆಳೆ ಹಾನಿಯಾಗಿರುವ ಕಾರಣ ರೈತರಿಗೆ ಇನ್ಪುಟ್ ಸಬ್ಸಿಡಿ ನೀಡುವುದು ಬಹಳ ಮುಖ್ಯವಾಗಿದೆ ಎಂದೇ ತಿಳಿಸಿದ್ದಾರೆ. ಜೊತೆಗೆ ಬರಪೀಡಿತ ಪ್ರದೇಶದ ಮಾಹಿತಿಯನ್ನು ನೀಡಿದ್ದಾರೆ.
236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು. ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,,18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಪರಿಗಣಿಸುವಾಗ ಕೇಂದ್ರ ಸರ್ಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ ಇದು 8 ವರ್ಷ ಹಳೆಯ ಮಾಹಿತಿಯಾಗಿದ್ದು, ಆಸ್ತಿ ವಿಭಜನೆ ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಾಗಿದ್ದು, 83 ಲಕ್ಷಕ್ಕೂ ಹೆಚ್ಚಿದೆ. ಪಿಎಂ-ಕಿಸಾನ್ ಯೋಜನೆಗೆ ರಾಜ್ಯದ ರೈತರ ದತ್ತಾಂಶ ಸಂಗ್ರಹಿಸುವ ತಂತ್ರಾಂಶ ಫ್ರೂಟ್ಸ್ನಲ್ಲಿ ದಾಖಲಿಸಿದ ಮಾಹಿತಿಯನ್ನು ಪರಿಗಣಿಸಲಾಗುತ್ತಿದೆ. ಅಂತೆಯೇ ಬೆಳೆ ಪರಿಹಾರ ವಿತರಣೆಗೂ ಈ ದತ್ತಾಂಶವನ್ನು ಪರಿಗಣಿಸುವಂತೆ ಕೇಳಿಕೊಂಡಿದ್ದಾರೆ.