ಸುದ್ದಿಒನ್, ಚಿತ್ರದುರ್ಗ, ಜನವರಿ.09 : ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆಗೆ ಶೀಘ್ರ ಭೂಸ್ವಾಧೀನ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾದ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಗೆ ಚಿತ್ರದುರ್ಗ ಮತ್ತು ಹಿರಿಯೂರು ತಾಲ್ಲೂಕು ವ್ಯಾಪ್ತಿಯ ಒಟ್ಟು 101 ಕಿ.ಮೀ. ಮಾರ್ಗಕ್ಕಾಗಿ 1211.13 ಎಕರೆ ಭೂಮಿಗಾಗಿ ಬೇಡಿಕೆ ಸಲ್ಲಿಸಿದಂತೆ ಈಗಾಗಲೆ 639.09 ಎಕರೆ ಭೂಸ್ವಾಧೀನಕ್ಕಾಗಿ ಪರಿಹಾರ ವಿತರಿಸಲಾಗಿದೆ. ಉಳಿದಂತೆ 572.04 ಎಕರೆ ಭೂಸ್ವಾಧೀನ ವಿವಿಧ ಹಂತದಲ್ಲಿದೆ.
ಭರಮಸಾಗರ-ಚೋಳಗಟ್ಟದವರೆಗೆ 36 ಕಿ.ಮೀ. ಪ್ರದೇಶದಲ್ಲಿ 281 ಎಕರೆ ಪ್ರದೇಶವನ್ನು ಈಗಾಗಲೆ ರೈಲ್ವೆ ಇಲಾಖೆಗೆ ಹಸ್ತಾಂತರಿಸಿದ್ದು, ಉಳಿದ 67.24 ಎಕರೆ ಜಮೀನು ಶೀಘ್ರ ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ವಿಶೇಷ ಭೂಸ್ವಾಧೀನ ಅಧಿಕಾರಿಗಳು ತಿಳಿಸಿದರು.
ಈ ತಿಂಗಳ ಅಂತ್ಯದೊಳಗೆ ಶೇ. 90 ರಷ್ಟು ಭೂಸ್ವಾಧೀನ ಕಾರ್ಯ ಪೂರ್ಣಗೊಳಿಸಿ, ಟೆಂಡರ್ ಪ್ರಕ್ರಿಯೆ ಪ್ರಾರಂಭಿಸುವಂತೆ ಸಚಿವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್, ಜಿ.ಪಂ. ಯೋಜನಾ ನಿರ್ದೇಶಕ ಡಾ. ರಂಗಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.