ಸುದ್ದಿಒನ್, ಚಿತ್ರದುರ್ಗ, ಜನವರಿ.09 : ಈ ಭಾಗದ ಜನರ ಬಹುದಿನದ ಬೇಡಿಕೆಯಾದ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆಗೆ ಕೇಂದ್ರ ಸರ್ಕಾರ 1,900 ಕೋಟಿ ರೂ. ಮಂಜೂರು ಮಾಡಿದೆ ಎಂದು
ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.
ಸೋಮವಾರ ಚಿತ್ರದುರ್ಗ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ, ನೀಲನಕ್ಷೆ ಹಾಗೂ ಕಾಮಗಾರಿ ಸ್ಥಳ ವೀಕ್ಷಿಸಿ, ಅಮೃತ್ ಯೋಜನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ದಾವಣಗೆರೆ-ಚಿತ್ರದುರ್ಗ-ಹಿರಿಯೂರು ಭಾಗದಲ್ಲಿ ಈಗಾಗಲೇ ರೈಲ್ವೇ ಯೋಜನೆಗೆ ಅಗತ್ಯವಾದ ಶೇ.82 ರಷ್ಟು ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ರೈಲ್ವೇ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಯೋಜನೆಯ ಟೆಂಡರ್ ಪ್ರಕ್ರಿಯೆ ಆರಂಭಿಸಲು ಶೇ.90 ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿರಬೇಕು. ಈ ಹಿನ್ನಲೆಯಲ್ಲಿ ಮುಂದಿನ ವಾರದಲ್ಲಿ ಶೇ.8 ರಷ್ಟು ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ರೈಲ್ವೇ ಇಲಾಖೆಗೆ ನೀಡಲಾಗುವುದು. ಮುಂದಿನ ತಿಂಗಳ ವೇಳೆಗೆ ಯೋಜನೆ ಟೆಂಡರ್ ಪ್ರಕ್ರಿಯೆ ಆರಂಭಗೊಳ್ಳುವುದಾಗಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭರವಸೆ ವ್ಯಕ್ತಪಡಿಸಿದರು.
ದಾವಣಗೆರೆ-ಭರಮಸಾಗರ ನಡುವಿನ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಈ ಭಾಗದ ಯೋಜನೆಗೆ ಚಾಲನೆ ನೀಡಲಾಗಿದೆ. ಭರಮಸಾಗರ-ಚಿತ್ರದುರ್ಗ ನಡುವಿನ ಭೂ ಸ್ವಾಧೀನ ಪಕ್ರಿಯೆಯೂ ಮುಗಿಯುವ ಹಂತಕ್ಕೆ ಬಂದಿದ್ದು, ಭರಮಸಾಗರ-ಚಿತ್ರದುರ್ಗ ನಡುವಿನ ರೈಲ್ವೇ ಯೋಜನೆಯನ್ನು ಸಹ ಆದಷ್ಟು ಶೀಘ್ರ ಆರಂಭಿಸುವುದಾಗಿ ಕೇಂದ್ರ ಸಚಿವ ನಾರಾಯಣಸ್ವಾಮಿ ತಿಳಿಸಿದರು.