ಚಿತ್ರದುರ್ಗ. ಫೆ.01 ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು, ಅರ್ಜಿಗಳನ್ನು ಸ್ವೀಕರಿಸಲು ಶಾಶ್ವತ ಅರ್ಜಿ ಸ್ವೀಕೃತಿ ಕೇಂದ್ರ ಸ್ಥಾಪಿಸಲಾಗಿದ್ದು, ಸಾರ್ವಜನಿಕರ ಕುಂದುಕೊರತೆ ಕೋಶ ಅರ್ಜಿ ಸ್ವೀಕೃತಿ ಕೇಂದ್ರಕ್ಕೆ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸುವ ಮೂಲಕ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಚಾಲನೆ ನೀಡಿದರು.
ಶಾಸಕ ವೀರೇಂದ್ರ ಪಪ್ಪಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅರ್ಜಿ, ಅಹವಾಲು ಸ್ವೀಕಾರ ಮಾಡುವ ಕೇಂದ್ರ ತೆರೆದಿರುವುದು ಉತ್ತಮ ನಡೆಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಸಾರ್ವಜನಿಕರು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ದೂರದೂರುಗಳಿಂದ ತಮ್ಮ ಕೆಲಸ ಕಾರ್ಯಗಳಿಗೆ, ವಿವಿಧ ಬಗೆಯ ಅರ್ಜಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸುತ್ತಾರೆ. ಅಂತಹವರು ಇಡೀ ದಿನ ಅಧಿಕಾರಿಗಳ ಭೇಟಿಗಾಗಿ ಕಾಯುವಂತಾಗಬಾರದು, ಅವರ ಸಮಯ ವ್ಯರ್ಥವಾಗಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು, ಅರ್ಜಿಗಳನ್ನು ಸ್ವೀಕರಿಸಲು ಶಾಶ್ವತ ಕೌಂಟರ್ ಸ್ಥಾಪಿಸಲಾಗಿದ್ದು, ಅರ್ಜಿ ಸ್ವಿಕೃತಿ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸಲ್ಲಿಸಬಹುದಾಗಿದೆ.
ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಪಡೆದು, ಅವರಿಗೆ ಸ್ವೀಕೃತಿ ನೀಡಲಾಗುವುದು. ಅಲ್ಲದೆ ಅಂತಹ ಅರ್ಜಿಗಳನ್ನು ಗಣಕೀಕರಣಗೊಳಿಸಿ, ಕಾಲಮಿತಿಯಲ್ಲಿ ವಿಲೇವಾರಿ ಮಾಡಲು, ಅರ್ಜಿಗಳಿಗೆ ಸ್ಪಂದಿಸಲು ವಿಶೇಷ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ ಅವರು, ಅರ್ಜಿಗಳ ವಿಲೇವಾರಿ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ, ಪರಿಶೀಲನೆ ಮಾಡಲಾಗುವುದು. ಸಾರ್ವಜನಿಕರ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಮಟ್ಟಿಗೆ ಪರಿಹಾರ ಒದಗಿಸಲು ಶ್ರಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.