ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.05 : ಮುಂದಿನ ಅಕ್ಟೋಬರ್ ಮಾಹೆಗೆ ಹಿರಿಯೂರಿನ ವಾಣಿವಿಲಾಸ ಜಲಾಶಯಕ್ಕೆ ಭದ್ರಾ ನೀರು ಹರಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ “ಜವನಗೊಂಡನಹಳ್ಳಿ ಹೋಬಳಿಮಟ್ಟದ ಪಂಚ ಗ್ಯಾರಂಟಿಗಳ ಅನುಷ್ಠಾನ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಮುಂಬರುವ ಅಕ್ಟೋಬರ್ ಮಾಹೆಗೆ ವಿವಿ ಸಾಗರ ಜಲಾಶಯಕ್ಕೆ ಭದ್ರಾ ನೀರು ಹರಿಸಲು ಗುರಿ ಇಟ್ಟುಕೊಂಡಿದ್ದು, ಕಾಮಗಾರಿ ಇರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ, ನೀರು ಹರಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು, ಗಾಯತ್ರಿ ಜಲಾಶಯಕ್ಕೆ 3 ರಿಂದ 4 ಅಡಿ ನೀರು ಹರಿಸಲು ಸಣ್ಣ ನೀರಾವರಿ ಸಚಿವರಿಗೆ ಮನವಿ ಸಲ್ಲಿಸಿದ್ದು, ಮಂಗಳವಾರ ಸಭೆ ನಡೆಸಿ, ಜೊತೆಗೆ ಚಿಕ್ಕನಾಯನಹಳ್ಳಿ ಶಾಸಕರೊಂದಿಗೆ ಚರ್ಚಿಸಿ, ಗಾಯತ್ರಿ ಜಲಾಶಯಕ್ಕೆ ನೀರು ಹರಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಈಗಾಗಲೇ ಬರಗಾಲ ಇದೆ. ಜವನಗೊಂಡನಹಳ್ಳಿ ಹೋಬಳಿಯಲ್ಲಿ ಹೆಚ್ಚು ಕುಡಿಯುವ ನೀರಿನ ತೊಂದರೆ ಇದೆ. ಹಾಗಾಗಿ ಗಾಯತ್ರಿ ಜಲಾಶಯದಿಂದ 40 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಲಾಗುವುದು. ಇದೇ ಫೆ.18ರಂದು ಐಮಂಗಲ ಹೋಬಳಿಯ 36 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಯೋಜನೆಗೆ ಚಾಲನೆ ನೀಡಲಾಗತ್ತಿದೆ ಎಂದು ತಿಳಿಸಿದ ಅವರು, ಹಿರಿಯೂರು ತಾಲ್ಲೂಕಿನ ಪ್ರತಿ ಹಳ್ಳಿಗೂ ಮಾರಿಕಣಿವೆಯಿಂದ ಕುಡಿಯುವ ನೀರು ಪೂರೈಕೆ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದ್ದು, ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದರು.
ಉಪವಿಭಾಗಾಧಿಕಾರಿ ಎಂ.ಕಾರ್ತೀಕ್ ಮಾತನಾಡಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಅರ್ಹ ಫಲಾನುಭವಿಗಳಿಗೆ ಅದು ತಲುಪಿದೆಯೇ ಎಂಬುದನ್ನು ಪರಿಶೀಲಿಸಲು ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದ್ದು, ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟಂತೆ ಕುಂದುಕೊರತೆಗಳು ಇದ್ದಲ್ಲಿ ಇಲ್ಲಿ ತೆರೆಯಲಾಗಿರುವ ಸೇವಾಸಿಂಧು ಕೌಂಟರ್‍ನಲ್ಲಿ ದೂರು ಸಲ್ಲಿಸಿದರೆ ಸಂಬಂಧಪಟ್ಟ ತಾಲ್ಲೂಕುಮಟ್ಟದ ಅಧಿಕಾರಿಗಳು ತಕ್ಷಣ ನೋಡಿ ತಾಂತ್ರಿಕ ಸಮಸ್ಯೆ ಇದ್ದಲ್ಲಿ ಬಗೆಹರಿಸಿಕೊಡುವರು ಎಂದರು.
ಸರ್ಕಾರದ ಯೋಜನೆಗಳ ಕಟ್ಟಕಡೆಯ ವ್ಯಕ್ತಿಗೂ ತಲುಪುವುದು ಮುಖ್ಯ. ಅರ್ಹ ಫಲಾನುಭವಿ ಯೋಜನೆಗಳಿಂದ ವಂಚಿತರಾಗಬಾರದು. ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಹಿರಿಯೂರು ತಹಶೀಲ್ದಾರ್ ರಾಜೇಶ್ ಕುಮಾರ್ ಮಾತನಾಡಿ, ಕಳೆದ ವರ್ಷದಿಂದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಹಿರಿಯೂರು ತಾಲ್ಲೂಕಿನಲ್ಲಿ ಅನ್ನಭಾಗ್ಯ ಯೋಜನೆಯಡಿ 65,019 ಫಲಾನುಭವಿಗಳು, ಗೃಹಲಕ್ಷ್ಮೀ ಯೋಜನೆಯಡಿ 66,014 ಫಲಾನುಭವಿಗಳು, ಗೃಹಜ್ಯೋತಿ ಯೋಜನೆಯಡಿ 64,778 ಕುಟುಂಬಗಳು ಪ್ರಯೋಜನೆ ಪಡೆದಿವೆ. ಶಕ್ತಿಯೋಜನೆಯಡಿ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ. ಹಿರಿಯೂರು ತಾಲ್ಲೂಕಿನಲ್ಲಿ ಯುವನಿಧಿ ಯೋಜನೆಯಡಿ 517 ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಫಲಾನುಭವಿ ಕೆ.ಆರ್.ಹಳ್ಳಿ ಗ್ರಾಮದ ಕೆ.ಟಿ.ಸುಜಾತಾ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳು ಹೆಣ್ಣು ಮಕ್ಕಳಿಗೆ ತುಂಬಾ ಅನುಕೂಲವಾಗಿವೆ. ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಸರಬರಾಜು ಮಾಡದಿದ್ದರೂ ಅಕ್ಕಿಯ ಬದಲು ಹಣ ನೀಡಿ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿದೆ. ಅನ್ನಭಾಗ್ಯ ಜಾರಿಯಿಂದ ಕುಟುಂಬದವರು ನೆಮ್ಮದಿಯಾಗಿ ಊಟ ಮಾಡಲು ಅನುವು ಮಾಡಿಕೊಟ್ಟಿದೆ. ಶಕ್ತಿ ಯೋಜನೆಯು ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಆಸ್ಪತ್ರೆಗೆ ಹೋಗಲು ಬಸ್‍ನಲ್ಲಿ ಪ್ರಯಾಣ ಬೆಳೆಸಲು ರೂ.100 ಬೇಕಿತ್ತು. ಆದರೆ ಇದೀಗ ಆಧಾರ್ ಕಾರ್ಡ್ ಇಟ್ಟುಕೊಂಡು ಅದೇ ರೂ.100 ತೆಗೆದುಕೊಂಡು ಆಸ್ಪತ್ರೆಗೆ ಭೇಟಿ ನೀಡಬಹುದಾಗಿದೆ.
ಗೃಹಲಕ್ಷ್ಮೀ ಯೋಜನೆಯಡಿ ರೂ.2000 ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ಖರ್ಚು ಮಾಡುತ್ತಿದ್ದೇನೆ. ಈಗಾಗಲೇ 4 ಕಂತು ಹಣ ಪಾವತಿಯಾಗಿದ್ದು, ಈ ಎಲ್ಲಾ ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ಖರ್ಚು ಮಾಡಿದ್ದೇನೆ. ಗೃಹಜ್ಯೋತಿ ಯೋಜನೆಯಡಿ 200 ಯುನಿಟ್‍ವರೆಗೂ ಉಚಿತ ವಿದ್ಯುತ್ ನೀಡುತ್ತಿರುವುದು ತುಂಬಾ ಅನುಕೂಲವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಕುಮಾರ್, ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಲ್ತಾಪ್ ಅಹಮದ್, ಉಪಾಧ್ಯಕ್ಷೆ ಸುಮಯಭಾನು, ಗ್ರಾಮ ಪಂಚಾಯಿತಿ ಸದಸ್ಯರು, ಫಲಾನುಭವಿಗಳು ಇದ್ದರು.