ಭದ್ರಾಮೇಲ್ದಂಡೆ ಯೋಜನೆ | ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ | ರೈತ ಸಂಘಟನೆಗಳಿಂದ ಪಂಜಿನ ಮೆರವಣಿಗೆ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.27 : ಭದ್ರಾಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಘೋಷಿಸಿ ಇದುವರೆವಿಗೂ ಹಣ ಬಿಡುಗಡೆಗೊಳಿಸದೆ ರೈತರನ್ನು ನಿರ್ಲಕ್ಷೆಯಿಂದ ಕಾಣುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಅಖಂಡ ಕರ್ನಾಟಕ ರೈತ ಸಂಘ, ವಿವಿಧ ಜನಪರ ಸಂಘಟನೆಳಿಂದ ಸೋಮವಾರ ರಾತ್ರಿ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗೆ ಧಿಕ್ಕಾರಗಳನ್ನು ಕೂಗಿದರು.

ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಹೊರಟ ಪಂಜಿನ ಮೆರವಣಿಗೆ ಲಕ್ಷ್ಮಿಬಜಾರ್, ಗಾಂಧಿವೃತ್ತ, ಸಂತೇಹೊಂಡದ ರಸ್ತೆ, ಎಸ್.ಬಿ.ಎಂ. ವೃತ್ತ, ಒನಕೆ ಓಬವ್ವ ವೃತ್ತದ ಮೂಲಕ ಜಿಲ್ಲಾ ಪಂಚಾಯಿತಿಗೆ ತಲುಪಿತು.

ಪಂಜಿನ ಮೆರವಣಿಗೆಯನ್ನುದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ ಮಧ್ಯಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಗೆ ಭದ್ರಾಮೇಲ್ದಂಡೆ ಯೋಜನೆಯನ್ನು ಜಾರಿಗೊಳಿಸುವಂತೆ ಕಳೆದ ಇಪ್ಪತ್ತೈದು ಮೂವತ್ತು ವರ್ಷಗಳಿಂದಲೂ ಹೋರಾಟ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಭದ್ರಾಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಮಂಜೂರು ಮಾಡಿದೆಯೆ ವಿನಃ ಬಿಡುಗಡೆಗೊಳಿಸಿಲ್ಲ. ಇದರಿಂದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಲೋಕಸಭೆ ಚುನಾವಣೆಯೊಳಗಾಗಿ ಕೇಂದ್ರ ಸರ್ಕಾರ ಹಣ ಬಿಡುಗಡೆಗೊಳಿಸಿ ಕಾಮಗಾರಿಗೆ ಚುರುಕು ನೀಡಿ ಆದಷ್ಠು ಬೇಗನೆ ಜಿಲ್ಲೆಗೆ ನೀರು ಹರಿಸಬೇಕು. ಇಲ್ಲವಾದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಮತ ಚಲಾಯಿಸಲಾಗುವುದೆಂದು ಎಚ್ಚರಿಕೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಡಿ.ಎಸ್.ಹಳ್ಳಿ, ತಾಲ್ಲೂಕು ಅಧ್ಯಕ್ಷ ಮಂಜುನಾಥ್, ರಾಜಣ್ಣ, ಹರಳಯ್ಯ, ಕರ್ನಾಟಕ ಜನಶಕ್ತಿಯ ಟಿ.ಶಫಿವುಲ್ಲಾ, ಸಿ.ಐ.ಟಿ.ಯು.ನ ಸಿ.ಕೆ.ಗೌಸ್‍ಪೀರ್, ರೈತ ಮುಖಂಡರುಗಳಾದ ನಾಗರಾಜರೆಡ್ಡಿ, ಲೋಕಣ್ಣ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಕುಮಾರ್ ಸಮತಳ, ಬಸ್ತಿಹಳ್ಳಿ ಸುರೇಶ್‍ಬಾಬು ಇನ್ನು ಮುಂತಾದವರು ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *