ಸುದ್ದಿಒನ್, ನವದೆಹಲಿ, ಮೇ. 28 : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಆರೋಗ್ಯ ತಪಾಸಣೆಗಾಗಿ ಏಳು ದಿನಗಳ ಕಾಲ ಮಧ್ಯಂತರ ಜಾಮೀನು ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಎಸ್ ಓಕ್ ನೇತೃತ್ವದ ಪೀಠವು ತಕ್ಷಣವೇ ಮಧ್ಯಂತರ ಜಾಮೀನು ಅರ್ಜಿಯನ್ನು ಆಲಿಸಲು ನಿರಾಕರಿಸಿತು. ಅಷ್ಟೇ ಅಲ್ಲ, ತಡವಾಗಿ ಅರ್ಜಿ ಸಲ್ಲಿಸಿದ್ದನ್ನೂ ಪೀಠ ಪ್ರಶ್ನಿಸಿದೆ.
ದೆಹಲಿ ಮದ್ಯ ಪ್ರಕರಣದಲ್ಲಿ ಮಧ್ಯಂತರ ಜಾಮೀನು ವಿಸ್ತರಿಸುವಂತೆ ಕೋರಿ ದೆಹಲಿ ಸಿಎಂ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸಾರ್ವತ್ರಿಕ ಚುನಾವಣೆ ಹಾಗೂ ಪ್ರಚಾರದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದ ಸುಪ್ರೀಂ ಕೋರ್ಟ್, ಜೂನ್ 2ರಂದು ಮತ್ತೆ ಜೈಲಿಗೆ ತೆರಳುವಂತೆ ಸೂಚಿಸಿದೆ.
ಇದರೊಂದಿಗೆ ಕೇಜ್ರಿವಾಲ್ ಅವರ ಜಾಮೀನು ನಾಲ್ಕು ದಿನಗಳಲ್ಲಿ ಮುಕ್ತಾಯವಾಗಲಿದೆ. ಆದರೆ ಸದ್ಯ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಇನ್ನೂ ಕೆಲವು ಪರೀಕ್ಷೆಗಳನ್ನು ಮಾಡಬೇಕಾಗಿದೆ ಎಂದು ವೈದ್ಯರ ತಂಡ ಹೇಳಿರುವುದಾಗಿ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಆದೇಶದಲ್ಲಿ ಕೇಜ್ರಿವಾಲ್ ಅವರು ಮಧ್ಯಂತರ ಜಾಮೀನನ್ನು ಇನ್ನೂ 7 ದಿನಗಳವರೆಗೆ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದರು. ಆದರೆ, ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಸ್ ಓಕ್ ನೇತೃತ್ವದ ಪೀಠ ತಿರಸ್ಕರಿಸಿದೆ.