ಸುದ್ದಿಒನ್, ಚಿತ್ರದುರ್ಗ, ಜೂನ್.26 : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಬೇಕು ಎಂದು ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಸಂಬಂಧಪಟ್ಟ ಏಜೆನ್ಸಿಯವರು ಕಾಮಗಾರಿಯನ್ನು ತ್ವರಿತವಾಗಿ ಮಾಡುತ್ತಿಲ್ಲ. ಕಳೆದ ನಾಲ್ಕು ತಿಂಗಳಲ್ಲಿ ಕೇವಲ ಶೇ.8ರಷ್ಟು ಮಾತ್ರ ಕಾಮಗಾರಿ ಆಗಿದೆ. ಗುತ್ತಿಗೆದಾರರು ಸಹಕರಿಸುತ್ತಿಲ್ಲ ಎಂದು ಭದ್ರಾ ಮೇಲ್ದಂಡೆ ಯೋಜನೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಾಶ್ ಸಭೆಗೆ ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಬಿ.ಜಿ.ಗೋವಿಂದಪ್ಪ, ಕಾಮಗಾರಿ ವಿಳಂಬ ಮಾಡುತ್ತಿರುವ ಏಜೆನ್ಸಿಯವರನ್ನು ಕಪ್ಪುಪಟ್ಟಿಗೆ ಸೇರಿಸಲು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಸಂಸದರಾದ ಗೋವಿಂದ ಎಂ.ಕಾರಜೋಳ, ವಿ.ಸೋಮಣ್ಣ ಹಾಗೂ ಬಸವರಾಜ್ ಬೊಮ್ಮಾಯಿ ಅವರು ದೆಹಲಿಯಲ್ಲಿ ಮಂಗಳವಾರದಂದು ಸಭೆ ನಡೆಸಿ, ಭದ್ರಾ ಮೇಲ್ದಂಡೆ ಯೋಜನೆಯ ರೂ.5300 ಕೋಟಿ ಅನುದಾನ ಶೀಘ್ರ ಬಿಡುಗಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ ಎಂದರು.
ಸಭೆಯಲ್ಲಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಖಲಿಂ ಉಲ್ಲಾ, ರಂಗಸ್ವಾಮಿ, ದೀಪಿಕಾ, ಸತೀಶ್, ತಿಮ್ಮಯ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.