ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 09 : ಸುಪ್ರೀಂಕೋರ್ಟ್ ನ ಮಹತ್ವದ ತೀರ್ಪಿನನ್ವಯ ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ನೇತೃತ್ವದಲ್ಲಿ ಸೆ.12 ರಂದು ಬೆಳಿಗ್ಗೆ 11 ಕ್ಕೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಎದುರು ತಮಟೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ.
ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳಿಗೆ ಸಂವಿಧಾನಬದ್ದವಾದ ಒಳ ಮೀಸಲಾತಿಯನ್ನು ಜಾರಿಗೆ ತರುವ ಅಧಿಕಾರ ಆಯಾ ರಾಜ್ಯಗಳಿಗಿದೆಯೆಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಯಾವುದೇ ಕಾರಣಕ್ಕೂ ತಡ ಮಾಡಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಒತ್ತಡ ಹೇರುವುದಕ್ಕಾಗಿ ತಮಟೆ ಚಳುವಳಿ ನಡೆಸಲಾಗುತ್ತಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ದಿಗೆ ಬಳಕೆಯಾಗಬೇಕಾಗಿರುವ ಎಸ್ಸಿ.ಪಿ. ಟಿ.ಎಸ್ಪಿ. ಯೋಜನೆಯ 25 ಸಾವಿರ ಕೋಟಿ ರೂ.ಗಳನ್ನು ಬೇರೆ ಉದ್ದೇಶಗಳಿಗೆ ಬಳಸಿರುವ ರಾಜ್ಯ ಸರ್ಕಾರದ ಕ್ರಮವನ್ನು ತಮಟೆ ಚಳುವಳಿಯಲ್ಲಿ ವಿರೋಧಿಸಿ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ರಾಜಿನಾಮೆಗೆ ಆಗ್ರಹಿಸಲಾಗುವುದು. ಹಾಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮಟೆ ಚಳುವಳಿಯನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಪ್ಪ ಮನವಿ ಮಾಡಿದ್ದಾರೆ.