34863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ

suddionenews
2 Min Read

 

ಬೆಂಗಳೂರು, ಅಕ್ಟೋಬರ್‌, 07: ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಅವರು ಇಂದು ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.

ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಯುಪಿಎಸ್ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ.

371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಖಾಲಿ ಹುದ್ದೆ ನೇಮಕಾತಿಗೆ ಕಾಲಮಿತಿ: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಅವರು ಸೂಚಿಸಿದರು.

ನೇಮಕಾತಿ ಕ್ಯಾಲೆಂಡರ್:‌ ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್‌ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಬೇಕು. ಕಾಲಮಿತಿಯೊಳಗಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಾಗಿ ಏಕರೀತಿಯ ಕ್ಯಾಲೆಂಡರ್‌ ಸಿದ್ಧಪಡಿಸಬೇಕು ಎಂದು ಹೇಳಿದರು.

ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಲು ಸೂಚನೆ ನೀಡಿದರು.

ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್‌ ಆರ್‌ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್‌ ಆರ್‌ ಸಿದ್ಧಪಡಿಸಲು ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಚಿವರಾದ‌ ಜಿ.ಪರಮೇಶ್ವರ, ಹೆಚ್.ಕೆ.ಪಾಟೀಲ್‌, ಪ್ರಿಯಾಂಕ ಖರ್ಗೆ, ದಿನೇಶ ಗುಂಡೂರಾವ್‌, ಡಾ.ಶರಣ ಪ್ರಕಾಶ ಪಾಟೀಲ್‌, ಮಧು ಬಂಗಾರಪ್ಪ, ಭೈರತಿ ಸುರೇಶ್, ಡಾ.ಎಂ.ಸಿ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *