ಬಳ್ಳಾರಿ: ಬೀಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಹಾರದ ಮೊತ್ತದಲ್ಲಿ ಹೆಚ್ಚಳ ಮಾಡಲಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಮೃತ ಬಾಣಂತಿಯರ ಕುಟುಂಬಕ್ಕೆ 2 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಈಗ 5 ಲಕ್ಷ ಘೋಷಣೆ ಮಾಡಲಾಗಿದೆ. ಸರ್ಕಾರದಿಂದ 2 ಲಕ್ಷ ಘೋಷಣೆ ಮಾಡುವುದರ ಜೊತೆಗೆ ಡ್ರಗ್ ಕಂಪನಿಯಿಂದಲೂ ಪರಿಹಾರ ವಸೂಲಿ ಮಾಡಲು ಸೂಚನೆ ನೀಡಲಾಗಿತ್ತು. ಇದೀಗ ಸರ್ಕಾರದಿಂದಾನೇ ಐದು ಲಕ್ಷ ಪರಿಹಾರ ಘೋಷಿಸಲಾಗಿದೆ.
ಈಗಾಗಲೇ ಬಳ್ಳಾರಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ ಕಂಟ್ರೋಲರ್ ಉಮೇಶ್ ಎಂಬಾತನನ್ನು ಅಮಾನತು ಮಾಡಲಾಗಿದೆ. ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪನಿಯನ್ನು ಬ್ಲಾಕ್ ಲೀಸ್ಟ್ ಗೆ ಸೇರಿಸಲಾಗಿದೆ. ಕಂಪನಿ ವಿರುದ್ಧ ಕ್ರಿಮಿನಲ್ ಕೇಸ್ ಕೂಡ ದಾಖಲಿಸಲಾಗಿದೆ. ಈಗಾಗಲೇ ಬಾಣಂತಿಯರ ಸಾವಿನ ಕುರಿತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿಯನ್ನು ಪಡೆಯಲಾಗಿದೆ.
ಬಳ್ಳಾರಿ ಆಸ್ಪತ್ರೆಯಲ್ಲಿ ಬಳಸಿದ್ದ ಔಷಧಿಯ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಘಟನೆಗೆ ಸಂಬಂಧಪಟ್ಟ ಪ್ರತಿಯೊಬ್ಬರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇನ್ನು ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನರ್‌ರಚನೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದರು.