ಸುದ್ದಿಒನ್, ಹಿರಿಯೂರು, ಡಿಸೆಂಬರ್. 21 : ಬೆಳ್ಳಂಬೆಳಗ್ಗೆಯೇ ಖಾಸಗಿ ಬಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಗುಯಿಲಾಳ್ ಟೋಲ್ ಬಳಿ ಘಟನೆ ನಡೆದಿದೆ.
ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಗುಯಿಲಾಳ್ ಟೋಲ್ ಬಳಿ ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ನಿರ್ವಾಹಕ ಪ್ರಯಾಣಿಕರನ್ನು ಕೆಳಕ್ಕಿಳಿಸಿದ್ದಾರೆ. ಘಟನೆ ವೇಳೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದು ಬಾರೀ ಅನಾಹುತ ತಪ್ಪಿದಂತಾಗಿದೆ.
ಬಸ್ ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಬಸ್ಸಿನಲ್ಲಿದ್ದ ಸುಮಾರು 30 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.