ಬೆಂಗಳೂರು: ಬಿಜೆಪಿ ಪಕ್ಷದಲ್ಲೂ ರಾಜ್ಯಾಧ್ಯಕ್ಷ ಸ್ಥಾನದ ಚರ್ಚೆ ಬಹಳ ಜೋರಾಗಿದೆ. ಶಾಸಕ ಯತ್ನಾಳ್ ಬಣ, ಸದಾ ವಿಜಯೇಂದ್ರ ಮೇಲೆ ಕಿಡಿಕಾರುತ್ತಾ ಇರುತ್ತಾರೆ. ಜೊತೆಗೆ ನವದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಗೆ ದೂರು ನೀಡಿದ್ದಾರೆ. ಇದರ ನಡುವೆ ವಿಜಯೇಂದ್ರ ಅವರು ನಾನೇ ರಾಜ್ಯಾಧ್ಯಕ್ಷ ಎಂದಿದ್ದಾರೆ. ಹೈಕಮಾಂಡ್ ಮೇಲೂ ನನಗೆ ವಿಶ್ವಾಸವಿದೆ ಎಂದಿದ್ದಾರೆ. ಇದರ ನಡುವೆ ಕೇಂದ್ರದ ಸಚಿವ ಶಿವರಾಜ್ ಚೌಹಾಣ್ ಅಧ್ಯಕ್ಷ ಸ್ಥಾನಕ್ಕೆ ಶೀಘ್ರವೇ ಚುನಾವಣೆ ನಡೆಯಲಿದೆ ಎಂದಿದ್ದಾರೆ.

ಬೆಂಗಳೂರಿಗೆ ಬಂದಿರುವ ಸಚಿವ ಶಿವರಾಜ್ ಚೌಹಾಣ್, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಚುನಾವಣೆ ಮೂಲಕ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷರ ಆಯ್ಕೆ ಮಾಡುತ್ತೇವೆ. ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷರ ಸ್ಥಾನದವರೆಗೂ ಚುನಾವಣೆ ನಡೆಯಲಿದೆ. ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ರೀತಿಯಾದ ಗೊಂದಲ ಇಲ್ಲ. ಎಲ್ಲರೂ ಸೇರಿ, ಚರ್ಚೆ ಮಾಡಿ, ಬಿಜೆಪಿ ರಾಜ್ಯಾಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಎಂದಿದ್ದಾರೆ.

ರಾಜ್ಯದ ಕೃಷಿ, ಗ್ರಾಮೀಣಾಭಿವೃದ್ಧಿ, ಕಂದಾಯ ಸಚಿವರ ಜೊತೆಗೆ ಸಭೆ ನಡೆಸಿದ ಚೌಹಾಣ್ ಅವರು, ಅನುದಾನ ಕೇಳದೆ ಇದ್ದರೂ ನಾವೇ ಘೋಷಣೆ ಮಾಡಿದ್ದೇವೆ. ಬಹಳಷ್ಟು ಅನುದಾನ ಈಗಾಗಲೇ ಕೊಟ್ಟಿದ್ದು, ಅದನ್ನು ಇನ್ನೂ ಕರ್ನಾಟಕ ಸರ್ಕಾರ ಖರ್ಚು ಮಾಡಿಲ್ಲ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆಯಾಗಿರುವ ಅನುದಾನದ ಸದ್ಬಳಕೆಯಾಗಬೇಕಿದೆ. ಪ್ರತಿ ಬಡವನಿಗೂ ಮನೆ ಸಿಗಬೇಕು ಎಂಬುದು ಮೋದಿಯವರ ಆಶಯ. ಹೀಗಾಗಿಯೇ ಮನೆಗಳು ಹಾಗೂ ಅನುದಾನವನ್ನು ಕೊಟ್ಟಿದ್ದೇವೆ ಎಂದಿದ್ದಾರೆ.


