ಬಾಲ್ಯ ವಿವಾಹ ತೊಲಗಿಸಲು ಬಡತನ ನಿರ್ಮೂಲನೆ ಅತ್ಯಗತ್ಯ : ಡಾ.ನಾಗಲಕ್ಷ್ಮೀ ಚೌಧರಿ

suddionenews
3 Min Read

ಚಿತ್ರದುರ್ಗ. ಫೆ.05: ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಬಾಲ್ಯವಿವಾಹಕ್ಕೆ ಬಡತನವೇ ಪ್ರಮುಖ ಕಾರಣ. ಹಾಗಾಗಿ ಸರ್ಕಾರದ ಯೋಜನೆ, ಸೌಲಭ್ಯಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಿದರೆ ಬಡತನ ನಿರ್ಮೂಲನೆಯ ಜೊತೆಗೆ ಬಾಲ್ಯವಿವಾಹ ಪದ್ಧತಿ ಕೂಡ ತೊಲಗಲು ಸಾಧ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು.

 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಿಳಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇದಕ್ಕೆ ಬಡತನ ಮುಖ್ಯ ಕಾರಣವೆಂಬುದು ತಿಳಿದುಬಂದಿದೆ.  ಹೀಗಾಗಿ ಸರ್ಕಾರದ ಯೋಜನೆಗಳು, ಸೌಲಭ್ಯಗಳನ್ನು, ಗ್ರಾಮಾಭಿವೃದ್ಧಿ ಯೋಜನೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಸಮಾಜದ ಎಲ್ಲ ಅರ್ಹರಿಗೆ ಸಮರ್ಪಕವಾಗಿ ತಲುಪಿಸಿದರೆ ಬಡತನ ನಿರ್ಮೂಲನೆಯಾಗಲಿದೆ. ಇದರಿಂದ ಬಾಲ್ಯವಿವಾಹವೂ ಕಡಿಮೆಯಾಗಲಿದೆ ಎಂದು ಹೇಳಿದರು.

ಮಹಿಳೆಯು ಪೊಲೀಸ್ ಠಾಣೆಗೆ ದೂರು ಕೊಡಲು ಬಂದಾಗ ತಕ್ಷಣ ಸ್ಪಂದಿಸುವುದು ಬಹಳ ಮುಖ್ಯ. ಹೆಣ್ಣು ಮಕ್ಕಳು ಪೊಲೀಸ್ ಠಾಣೆಗೆ ಬಂದಾಗ ಮಹಿಳಾ ಸ್ನೇಹಿ ವಾತಾವರಣ ಇರಬೇಕು ಎಂದು ತಿಳಿಸಿದ ಅವರು, ಮಹಿಳಾ ಸ್ನೇಹಿ ಪೊಲೀಸ್‍ಗೆ ಕರ್ನಾಟಕ ಪೊಲೀಸ್ ದೇಶದಲ್ಲಿಯೇ ನಂ.1 ಸ್ಥಾನದಲ್ಲಿದೆ ಎಂದರು.

ಸಾಮಾನ್ಯ ಜನರಿಗೆ ಅರಿವು ಮೂಡಿಸಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಸಾಮಾನ್ಯ ಜನರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆ ನಡೆಸಲಾಗುತ್ತಿದೆ. ದೌರ್ಜನ್ಯ ಪ್ರಕರಣ ನಡೆದ ಪ್ರದೇಶಗಳನ್ನು ಗುರುತಿಸಿ, ನಿರಂತರವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಚಿಕ್ಕಪುರ ಗೊಲ್ಲರಹಟ್ಟಿ ಕಂದಾಯ ಗ್ರಾಮ ಮಾಡಿ: ಚಿತ್ರದುರ್ಗ ತಾಲ್ಲೂಕಿನ ಚಿಕ್ಕಪುರ ಗೊಲ್ಲರಹಟ್ಟಿ ಮೂಲಸೌಲಭ್ಯಗಳಿಂದ ವಂಚಿತವಾಗಿದ್ದು, ಚಿಕ್ಕಪುರ ಗೊಲ್ಲರಹಟ್ಟಿಯನ್ನು ಕಂದಾಯ ಗ್ರಾಮವನ್ನಾಗಿ ಮಾಡಿ, ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.
ಚಿಕ್ಕಪುರ ಗೊಲ್ಲರಹಟ್ಟಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ನಾಲ್ಕೈದು ಗ್ರಾಮಗಳಿಗೆ ಬಸ್ ಸೌಲಭ್ಯದ ಕೊರತೆ ಇದ್ದು, ಹೆಣ್ಣು ಮಕ್ಕಳ ಹಿತದೃಷ್ಠಿಯಿಂದ ಕೂಡಲೇ ಬಸ್ ಕಾರ್ಯಾಚರಣೆಗೆ ಕ್ರಮವಹಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಅರ್ಹರಿಗೆ ಕೂಲಿ ಕೆಲಸ ನೀಡಬೇಕು. ಗ್ರಾಮದಲ್ಲಿಯೇ ಪಡಿತರ ವಿತರಣೆಯಾಗಬೇಕು. ಗ್ರಾಮದಲ್ಲಿ ಒಮ್ಮೆ ವಿದ್ಯುತ್ ಹೋದರೆ, ಐದಾರು ದಿನ ವಿದ್ಯುತ್ ಸಂಪರ್ಕ ಪುನರ್ ಸ್ಥಾಪನೆ ಆಗುವುದಿಲ್ಲ, ವಿದ್ಯುತ್ ಸಮಸ್ಯೆಯಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸುತ್ತಿಲ್ಲ, ಅಲ್ಲದೆ ದೂರವಾಣಿ ಕರೆ ಮಾಡಿದರೂ ಉತ್ತರಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದು, ವಿದ್ಯುತ್ ಸಮಸ್ಯೆಯಾಗದಂತೆ ಸೂಕ್ತ ಕ್ರಮವಹಿಸಬೇಕು, ಸಾರ್ವಜನಿಕರ ದೂರಿಗೆ ಸ್ಪಂದಿಸದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಗ್ರಾಮೀಣ ಅಭಿವೃದ್ಧಿಯಲ್ಲಿ ಪಂಚಾಯಿತಿ ಅಭಿವೃದ್ಧಿಗಳ ಪಾತ್ರ ಬಹಳ ಮುಖ್ಯವಾಗಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಇಚ್ಛಾಶಕ್ತಿ ಇದ್ದರೆ ಗ್ರಾಮಗಳು ಅಭಿವೃದ್ಧಿಯಾಗಲಿದೆ. ಹಾಗಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿಗಳಿಗೆ ಅಗತ್ಯ ಸಲಹೆ-ಸೂಚನೆ, ಪ್ರಗತಿ ಪರಿಶೀಲನೆ ನಡೆಸುವ ಮೂಲಕ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಹೇಳಿದರು.

ಗೊಲ್ಲರಹಟ್ಟಿಗಳಲ್ಲಿ ಮೌಢ್ಯ ಪದ್ಧತಿ, ಸಂಪ್ರದಾಯಗಳು ಕಡಿಮೆಯಾಗುತ್ತಾ ಬಂದಿವೆ. ಜಿಲ್ಲೆಯಲ್ಲಿ ಸುಮಾರು 300 ಗೊಲ್ಲರಹಟ್ಟಿಗಳಿದ್ದು, ಈ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಕ್ರಮವಹಿಸಿದ್ದು, ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ಸುಬ್ರಾನಾಯಕ್ ಮಾತನಾಡಿ, ಗೊಲ್ಲರಹಟ್ಟಿಗಳಿಗೆ ರಸ್ತೆ, ಚರಂಡಿ, ನಿವೇಶನ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳ ಕಲ್ಪಿಸಲು ಈಗಾಗಲೇ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಮೀಕ್ಷೆ ಕಾರ್ಯ ನಡೆಸುತ್ತಿದ್ದು, ಮಾಹಿತಿ ಪಡೆಯಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *