15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

suddionenews
1 Min Read

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಹೇಳಿದರು.

ನಗರದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎರಡು ದಿನಗಳ “ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇದರ ಜೊತೆಗೆ ಅನುದಾನಿತ ಶಾಲೆಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಲ್ಲಿ ಶೇ.80 ರಷ್ಟು ಶಿಕ್ಷಕರನ್ನು ಆದಷ್ಟು ಶೀಘ್ರ ನೇಮಕಾತಿ ಮಾಡಿ, ಶಿಕ್ಷಣವನ್ನು ಮೇಲ್ದರ್ಜೆಗೆ ಕೊಂಡ್ಯೊಯುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ ಅವರು, ದ್ವಿತೀಯ ಪಿಯು ಪೂರೈಸಿದ ಮಕ್ಕಳು ನೀಟ್, ಸಿಇಟಿ ಪರೀಕ್ಷೆಗಾಗಿ ಕೋಚಿಂಗ್ ತರಗತಿಗಳಿಗೆ ಹೋಗಬೇಕಾಗುತ್ತದೆ. ಕೋಚಿಂಗ್‍ಗಾಗಿ ಸುಮಾರು 4 ರಿಂದ 5 ಲಕ್ಷದವರೆಗೆ ಶುಲ್ಕ ಪಾವತಿಸಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ನಮ್ಮ ರಾಜ್ಯದಲ್ಲಿ ಸುಮಾರು 25 ಸಾವಿರ ಮಕ್ಕಳಿಗೆ ನೀಟ್, ಸಿಇಟಿ ಸೇರಿದಂತೆ ವೃತ್ತಿಪರ ಕೋರ್ಸ್‍ಗಳಿಗೆ ಉಚಿತವಾಗಿ ತರಬೇತಿ ನೀಡುವ ಕಾರ್ಯಕ್ರಮವನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.

8, 9 ಹಾಗೂ 10ನೇ ತರಗತಿಯ ಮಕ್ಕಳಿಗೆ “ಸ್ಕಿಲ್ ಅಟ್ ಸ್ಕೂಲ್” ಎಂಬ ಕಾರ್ಯಕ್ರಮವನ್ನು ಇದೇ ಮೊದಲಬಾರಿಗೆ ಪ್ರಾರಂಭ ಮಾಡಲಾಗುವುದು. ಇದರಿಂದ ಕಲಿಕೆಯ ಜೊತೆಗೆ ಪ್ರಾಯೋಗಿಕ ಜ್ಞಾನ ಪಡೆಯಬಹುದಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸಂಗೀತ, ಕಲೆ ಶಿಕ್ಷಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಮೊದಲ ಹಂತದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ನೇಮಕ ಮಾಡಿ, ಮುಂದಿನ ದಿನಗಳಲ್ಲಿ ಆರ್ಥಿಕ ವ್ಯವಸ್ಥೆ ನೋಡಿಕೊಂಡು, ಉಳಿದ ಶಾಲೆಗಳಿಗೂ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *