ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಪಾಟೀಲ್ ಅವರಿಗೆ ಹೊಸ ಹುದ್ದೆ..!

suddionenews
1 Min Read

ಬೆಂಗಳೂರು: ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರು ಇತ್ತೀಚೆಗೆ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ರಾಜ್ಯ ಸರ್ಕಾರ ಹೊಸ ಹುದ್ದೆಯೊಂದನ್ನ ನೀಡಿದೆ. ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅಧಿಸೂಚನೆಯಲ್ಲಿ ಬಿ.ಆರ್ ಪಾಟೀಲ್, ಮಾನ್ಯ ಶಾಸಕರು, ಆಳಂದ ವಿಧಾನಸಭಾ ಕ್ಷೇತ್ರ ಇವರನ್ನು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ (ಯೋಜನ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ) ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ಎಲ್ಲಾ ಸೌಲಭ್ಯಗಳೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಲಾಗಿದೆ.

 

ಕಾಂಗ್ರೆಸ್ ಸರ್ಕಾರ ರಚನೆಯಾದಾಗಿನಿಂದ ಹಲವು ಹಿರಿಯ ನಾಯಕರು ಅಸಮಾಧಾನಗೊಂಡಿದ್ದರು. ಆರ್.ವಿ.ದೇಶಪಾಂಡೆ, ಬಿ.ಆರ್.ಪಾಟೀಲ್ ಹಾಗೂ ಬಸವರಾಜ್ ರಾಯರೆಡ್ಡಿಯವರು ಅಸಮಾಧಾನಗೊಂಡಿದ್ದರು. ಆ ಕಾರಣದಿಂದಾನೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಆರ್.ವಿ.ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಿರಿಯ ಶಾಸಕ ಬಸವರಾಜ ರಾಯರಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಹಾಗೂ ಬಿ.ಆರ್‌ ಪಾಟೀಲ್‌ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರನ್ನಾಗಿ ನೇಮಿಸಲಾಗಿತ್ತು. ಆದರೆ ಬಿ.ಆರ್‌ ಪಾಟೀಲ್‌ ಏಕಾಏಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಆರ್ ಪಾಟೀಲ್ ಅವರ ಅಸಮಾಧಾನ ಶಮನ ಮಾಡಲು ರಾಜ್ಯ ಸರ್ಕಾರ ಮಹತ್ವದ ಹುದ್ದೆ ನೀಡಿದೆ.

Share This Article
Leave a Comment

Leave a Reply

Your email address will not be published. Required fields are marked *