ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇದೀಗ ಮತ್ತೊಮ್ಮೆ ಸಂಪುಟ ವಿಸ್ತರಣೆ ಮುನ್ನಲೆಗೆ ಬಂದಿದೆ. ಅದರಲ್ಲೂ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯೇ ಜೋರಾಗಿದೆ. ಇದೀಗ ಬಜೆಟ್ ಮಂಡನೆಗೂ ದಿನಾಂಕ ಫಿಕ್ಸ್ ಮಾಡಲಾಗಿದ್ದು, ಬಜೆಟ್ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಕೂಡ ಸಚುವ ಸ್ಥಾನದ ಆಕಾಂಕ್ಷೆಯ ಬಗ್ಗೆ ಮಾತನಾಡಿದ್ದಾರೆ.
ರಾಜ್ಯದಲ್ಲಿ ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬಜೆಟ್ ಮಂಡನೆ ಮಾಡಲಿದೆ. ಇದಾದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಆಗ ನನಗೂ ಸಚಿವ ಸ್ಥಾನ ಸಿಗಲಿದೆ. ನನಗೆ ಸಚಿವ ಸ್ಥಾನ ಕೊಡಲೇಬೇಕು. ಕೊಟ್ಟೆ ಕೊಡುತ್ತಾರೆ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೇ ವಿನಯ್ ಕುಲಕರ್ಣಿ ಸಚಿವ ಸಂಪುಟ ಸೇರುವ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಆ ಸಮಯದಲ್ಲಿ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಇದೀಗ ಸಂಪುಟ ಪುನರ್ ರಚನೆಯ ಬಗ್ಗೆಯೂ ಸುಳಿವು ನೀಡಿದ್ದು, ಸಚಿವ ಸ್ಥಾನದ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಸಿಎಂ ಬದಲಾವಣೆಯ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಗುತ್ತಾರೋ, ಇಲ್ವೋ ಗೊತ್ತಿಲ್ಲ. ಅವರನ್ನೇ ಸಿಎಂ ಆಗಿ ಮುಂದುವರೆಸುತ್ತಾರಾ ಎಂಬುದು ನಮಗೂ ಗೊತ್ತಿಲ್ಲ. ಹೈಕಮಾಂಡ್ ಈ ನಿರ್ಧಾರಗಳನ್ನ ತೆಗೆದುಕೊಳ್ಳಲಿದೆ. ಸಿದ್ದರಾಮಯ್ಯ ಅವರು ಆರ್ಥಿಕ ತಜ್ಞರಾಗಿ, ಹಣಕಾಸು ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರ ಜಾಗದಲ್ಲಿ ಬೇರೆ ಯಾರೇ ಇದ್ದಿದ್ದರೂ ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಈಗ ಎಲ್ಲರಿಗೂ ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿವೆ ಎಂದಿದ್ದಾರೆ.




