ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 19 : ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಆಪಾದಿಸಿದರು.
ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿರುವುದರಿಂದ ಮಂಗಳವಾರ ಸಂಭ್ರಮಾಚರಣೆಯಾಗುತ್ತಿರುವುದು ಯಾವ ಪುರುಷಾರ್ಥಕ್ಕೆ? ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ದಿಯಾಗಿಲ್ಲ. ಜನರ ಮೇಲೆ ತೆರಿಗೆ ಹೊರೆ ಹೇರುತ್ತಿರುವುದಲ್ಲದೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ಜನಸಾಮಾನ್ಯರು, ಬಡವರು ತತ್ತರಿಸುವಂತೆ ಮಾಡಿರುವುದೆ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನೆ ಎಂದು ವ್ಯಂಗ್ಯವಾಡಿದರು.
ರಾಜ್ಯದ ಆರುವರೆ ಕೋಟಿ ಜನ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ. ಹೊಸಪೇಟೆಯಲ್ಲಿ ನಡೆಯುತ್ತಿರುವುದು ಸಾಧನಾ ಸಮಾವೇಶವಲ್ಲ. ಲೂಟಿಕೋರರ ಸಮಾವೇಶ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಶಾಸಕರುಗಳು ಲೂಟಿ ಹೊಡೆಯುತ್ತಿದ್ದಾರೆ. ನಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ನಲವತ್ತು ಪರ್ಸೆಂಟೆ ಕಮಿಷನ್ ಸರ್ಕಾರ ಎನ್ನುತ್ತಿದ್ದ ಕಾಂಗ್ರೆಸ್ ಈಗ ಅರವತ್ತು ಪರ್ಸೆಂಟ್ ಕಮಿಷನ್ ಹೊಡೆಯುತ್ತಿದೆ. ಕಾಮಗಾರಿಗಳನ್ನೆ ನಡೆಸದೆ ಸುಳ್ಳು ಬಿಲ್ ಮಾಡಿಕೊಂಡು ಹಣ ಗುಳುಂ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ಬಿಜೆಪಿ. ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಅಭಿವೃದ್ದಿಯಾಗಿದ್ದನ್ನು ಬಿಟ್ಟರೆ ಕಾಂಗ್ರೆಸ್‍ನಿಂದ ಗುರುತರವಾದ ಒಂದು ಕೆಲಸವೂ ಆಗಿಲ್ಲ. ಹದಿನಾರು ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ರಾಜ್ಯದ ಯಾವ ಕ್ಷೇತ್ರಗಳಿಗೂ ನಯಾ ಪೈಸೆ ಬಿಡುಗಡೆಗೊಳಿಸುತ್ತಿಲ್ಲ ಎಂದು ಕಿಡಿ ಕಾರಿದರು.
ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಭದ್ರಾ ಮೇಲ್ದಂಡೆ ಯೋಜನೆಗೆ ಎಂಟು ಸಾವಿರ ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿದ್ದರು. ಈಗ ಅದು 23 ಸಾವಿರ ಕೋಟಿ ರೂ.ಗಳಿಗೆ ಏರಿದೆ. ಕೇಂದ್ರ ಸರ್ಕಾರದ ಮೇಲೆ ನೆಪ ಹೇಳಿಕೊಂಡು ಅಪ್ಪರ್‍ಭದ್ರಾ ಯೋಜನೆಯನ್ನು ಮೂಲೆಗುಂಪು ಮಾಡಿರುವ ರಾಜ್ಯ ಸರ್ಕಾರ ಮೊದಲು ತನ್ನ ಪಾಲಿನ ಹಣ ಖರ್ಚು ಮಾಡಿ ಯೋಜನೆಯನ್ನು ಪೂರ್ಣಗೊಳಿಸಲಿ. ಸಾಧಕ-ಬಾಧಕಗಳನ್ನು ನೋಡಿಕೊಂಡು ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡಲಿದೆ. ಚಿತ್ರದುರ್ಗ-ತುಮಕೂರು-ದಾವಣಗೆರೆ ನೇರ ರೈಲು ಮಾರ್ಗ ಯೋಜನೆಗೆ ಮೊದಲು ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಬಿಡುಗಡೆಗೊಳಿಸಲಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಒತ್ತಾಯಿಸಿದರು.
ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸಂಪತ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ನಗರ ಮಂಡಲ ಅಧ್ಯಕ್ಷ ಲೋಕೇಶ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ಮಾಧ್ಯಮ ಸಹ ಸಂಚಾಲಕ ಛಲವಾದಿ ತಿಪ್ಪೇಸ್ವಾಮಿ, ಯಶವಂತ್, ಕಿರಣ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.











