ಇಂದಿರಾ ಕ್ಯಾಂಟನ್‌ನಲ್ಲಿ ಮೆನು ಪ್ರಕಾರ ಊಟ ಹಾಗೂ ಉಪಹಾರ ನೀಡುತ್ತಿಲ್ಲ : ದೂರುಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ : ಪೌರಾಡಳಿತ ಸಚಿವ ರಹೀಂಖಾನ್ ಹೇಳಿಕೆ

2 Min Read

ಚಿತ್ರದುರ್ಗ. ಜೂನ್ 04 : ಇಂದಿರಾ ಕ್ಯಾಂಟೀನ್‍ನಲ್ಲಿನ ಊಟ ಹಾಗೂ ಉಪಹಾರದ ಮೆನುಗೆ ಸಂಬಂಧಿಸಿದಂತೆ ದೂರುಗಳು ಕೇಳಿ ಬಂದಿದ್ದು, ಈ ಕುರಿತು ದೂರುಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದರು.

ಚಿತ್ರದುರ್ಗ ನಗರದ ಪ್ರವಾಸಿ ಮಂದಿರ ಪಕ್ಕದ ಇಂದಿರಾ ಕ್ಯಾಂಟೀನ್‍ಗೆ ಬುಧವಾರ ಸಂಜೆ ಭೇಟಿ ನೀಡಿ, ಪರಿಶೀಲನೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇಂದಿರಾ ಕ್ಯಾಂಟೀನ್‍ನಲ್ಲಿ ಸಮರ್ಪಕವಾಗಿ ಮೆನು ಪ್ರಕಾರ ಊಟ ಹಾಗೂ ಉಪಹಾರ ನೀಡುತ್ತಿಲ್ಲ. ಹೊಸ ಮೆನು ನಿಗದಿಪಡಿಸಿ, ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬುದಾಗಿ ದೂರುಗಳು ಕೇಳಿಬಂದಿದ್ದವು.  ಈ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‍ಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ಅಮಾನತಿಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್‍ನಲ್ಲಿ ಬೆಳಿಗಿನ ಉಪಹಾರಕ್ಕೆ ರೂ.5 ಹಾಗೂ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ರೂ.10 ದರ ನಿಗಧಿಪಡಿಸಲಾಗಿದೆ. ಆದಾಗ್ಯೂ ಸಹ ನಿಗಧಿಪಡಿಸಿದ ದರಕ್ಕಿಂತ ಹೆಚ್ಚಿನದಾಗಿ ಹಣ ಪಡೆಯಲಾಗುತ್ತಿದೆ ಎಂಬ ದೂರುಗಳಿವೆ, ಹಾಗಾಗಿ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಬೆಂಗಳೂರಿನಲ್ಲಿ ಜರುಗಿದ ಆರ್‍ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಹಲವರು ಸಾವಿಗೀಡಾಗಿದ್ದು, ಮೃತರ ಕುಟುಂಬಗಳಿಗೆ ಸರ್ಕಾರ ಪರಿಹಾರ ಘೋಷಿಸುತ್ತದೆಯೇ ಎಂಬುದಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಆರ್‍ಸಿಬಿ ಸಂಭ್ರಮಾಚರಣೆ ವೇಳೆ ಸಾವಿಗೀಡಾಗಿರುವುದು ತೀವ್ರ ದುಃಖದ ಸಂಗತಿಯಾಗಿದ್ದು, ಹೆಚ್ಚಿನ ಜನರ ದಟ್ಟಣೆಯಿಂದಾಗಿ ಹಾಗೂ ನಿರೀಕ್ಷೆಗೂ ಮೀರಿ ಜನ ಸೇರಿದ್ದರಿಂದಾಗಿ ಈ ಘಟನೆ ಆಕಸ್ಮಿಕವಾಗಿ ನಡೆದಿದೆ. ಗುರುವಾರ ಸಚಿವ ಸಂಪುಟದ ಸಭೆ ನಡೆಯಲಿದ್ದು, ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳು ಪರಿಹಾರ ಘೋಷಣೆ ಬಗ್ಗೆ ತೀರ್ಮಾಣ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್‍ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವ ರಹೀಂ ಖಾನ್ ಅವರು, ಕ್ಯಾಂಟೀನ್‍ನಲ್ಲಿ ರಾತ್ರಿ ಊಟಕ್ಕಾಗಿ ತಯಾರಾಗಿದ್ದ ಚಪಾತಿ, ಪಲ್ಯ, ಅನ್ನ ಸಾಂಬಾರ್ ಸವಿದು, ಊಟದ ಗುಣಮಟ್ಟ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ನಗರಸಭೆ ಅಧಿಕಾರಿಗಳು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks