ಬೆಂಗಳೂರು: ಜೆಡಿಎಸ್ ನಲ್ಲೂ ಆಗಾಗ ರಾಜ್ಯಾಧ್ಯಕ್ಷರ ಬದಲಾವಣೆಯ ಚರ್ಚೆ ಜೋರಾಗಿರುತ್ತದೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಸದ್ಯಕ್ಕೆ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಪಕ್ಷಕ್ಕೆ ಸದ್ಯ ನಾನೇ ಅಧ್ಯಕ್ಷನಾಗಿದ್ದೇನೆ. ರಾಜ್ಯಾಧ್ಯಕ್ಷರ ಬದಲಾವಣೆ ಬೇಡ ಎಂಬ ಇಂಗಿತವೂ ಇದೆ. ಪಕ್ಷದಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯ ಚರ್ಚೆ ಇಲ್ಲ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿ ಅವರಿಗೆ ರಾಜ್ಯಾಧ್ಯಕ್ಷರ ಜವಾಬ್ದಾರಿ ನೀಡಬೇಕು ಎಂಬ ಮಾತಿದೆ ಆದರೆ ಇದ್ಯಾವುದರ ಬಗ್ಗೆಯೂ ಚರ್ಚೆ ಆಗಿಲ್ಲ. ನಾನೇ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುತ್ತೇನೆ ಎಂಬುದಾಗಿ ಹೇಳಿದ್ದಾರೆ.
ಇದೇ ವೇಳೆ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮಿತಿಯ ಬಗ್ಗೆಯೂ ಮಾತನಾಡಿ, ಶೀಘ್ರವೇ ಜೆಡಿಎಸ್ – ಬಿಜೆಪಿ ಸಮನ್ವಯ ಸಮಿತಿ ರಚನೆ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಜೆಪಿ ನಾಯಕರು ಬಂದು ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ ಹತ್ತು ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು ಕೋರ್ ಕಮಿಟಿ ಪುನರ್ ರಚನೆ ಬಗ್ಗೆ ನಮ್ಮ ಪಕ್ಷದಲ್ಲಿ ಒಂದು ಸಭೆ ಆಗಿದೆ. ಕೋರ್ ಕಮಿಟಿ ಮತ್ತು ಕಾರ್ಪೋರೇಷನ್ ಚುನಾವಣೆ ಸಂಬಂಧ ಪಕ್ಷ ಸಂಘಟನೆ ಸಮಿತಿ ಮಾಡುವ ನಿರ್ಧಾರ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆಯೂ ಕ್ಲಾರಿಟಿ ನೀಡಿದ್ದಾರೆ.






