ಚಿತ್ರದುರ್ಗ. ಏ.17: ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ರಸ್ತೆ ಸುರಕ್ಷತೆ ಹೆಚ್ಚಿಸಲು ವಿವಿಧ ಇಲಾಖೆಗಳು ಕೈಜೋಡಿಸುವ ಮೂಲಕ ಅಪಘಾತ ನಿಯಂತ್ರಣಕ್ಕೆ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಹೆದ್ದಾರಿಗಳಲ್ಲಿ ಈ ಹಿಂದೆ ಕಪ್ಪುಚುಕ್ಕೆ ವಲಯಗಳನ್ನು ಗುರುತಿಸಿ, ಅಪಘಾತ ತಡೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆಗಳನ್ನು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಇಳಿಕೆಗೆ ಕೈಗೊಂಡಿರುವ ಕ್ರಮಗಳೇನು? ರಸ್ತೆ ಸುರಕ್ಷತೆಗಾಗಿ ಕ್ರಮ ಕೈಗೊಂಡಿದ್ದಲ್ಲಿ ಅಪಘಾತಗಳ ಸಂಖ್ಯೆ ಇಳಿಕೆಯಾಗಿದೆಯೇ, ಇಲ್ಲವೇ ಎಂಬುವುದರ ಕುರಿತು ವಿಶ್ಲೇಷಣಾ ವರದಿ ಸಲ್ಲಿಸಬೇಕು ಎಂದು ತಿಳಿಸಿದ ಅವರು, ಈಗಾಗಲೇ ಹಂಪ್ಸ್, ರಂಬಲ್ಸ್, ಸೂಚನಾ ಫಲಕಗಳನ್ನು ಹಾಕಿರುವ ಕಡೆ ಅಪಘಾತಗಳ ಸಂಖ್ಯೆ ಇಳಿಕೆ ಆಗಿದೆಯೇ ಎಂಬ ಕುರಿತು ವಿಶ್ಲೇಷಣಾತ್ಮಕ ವರದಿ ನೀಡಬೇಕು ಎಂದು ತಿಳಿಸಿದರು.
ನಗರದಲ್ಲಿ 27 ಕಡೆ ಆಟೋ ಪಾರ್ಕಿಂಗ್:
ಚಿತ್ರದುರ್ಗ ನಗರಸಭೆ ವತಿಯಿಂದ ನಗರದಲ್ಲಿ 27 ಕಡೆ ಆಟೋ ಪಾರ್ಕಿಂಗ್‍ಗಾಗಿ ಜಾಗ ಗುರುತಿಸಲಾಗಿದ್ದು, ಈಗಾಗಲೇ 12 ಆಟೋ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ ಇನ್ನೂ 15 ಆಟೋ ಪಾರ್ಕಿಂಗ್ ಬಾಕಿ ಇದೆ ಎಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದರು.
ಚಿತ್ರದುರ್ಗ ನಗರದ ಗಾಂಧಿ ವೃತ್ತದಿಂದ ಪ್ರವಾಸಿ ಮಂದಿರ ಮಾರ್ಗದ ರಸ್ತೆಯ ಪಕ್ಕದಲ್ಲಿ ಆಟೋಗಳನ್ನು ಸಾಲಾಗಿ ನಿಲ್ಲಿಸುತ್ತಿದ್ದಾರೆ. ನಿಯಮಿತವಾಗಿ ತಪಾಸಣೆ ನಡೆಸಿ, ಆಟೋಗಳನ್ನು ನಿಲ್ಲಿಸದಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸಂಚಾರಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ :
ನಗರದ ಮುರುಘಾಮಠದಿಂದ ಕವಾಡಿಗರ ಹಟ್ಟಿ ಮಾರ್ಗ ಮೂಲಕ ಹೊಳಲ್ಕೆರೆ ರಸ್ತೆಗೆ ಸಂಪರ್ಕಿಸುವ ರಸ್ತೆಯನ್ನು ವಿಸ್ತರಿಸಿ ಅಭಿವೃದ್ಧಿಪಡಿಸುವ ಕಾಮಗಾರಿ ಹಲವು ವರ್ಷಗಳಿಂದಲೂ ನಡೆಯುತ್ತಲೇ ಇದೆ. ಈ ಮಾರ್ಗದಲ್ಲಿ ಕವಾಡಿಗರ ಹಟ್ಟಿ ಬಳಿ, ಹಾಗೂ ಮುಂದಿನ ದಾರಿಯಲ್ಲಿ ರಸ್ತೆ ಗುಂಡಿ ಬಿದ್ದು ವಾಹನಗಳು ಅಪಘಾತಕ್ಕೆ ಒಳಗಾಗುತ್ತಿವೆ. ರಸ್ತೆ ಕಾಮಗಾರಿ ಇದುವರೆಗೂ ಪೂರ್ಣಗೊಂಡಿಲ್ಲ ಎಂದು ಜಿಲ್ಲಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳು ಉತ್ತರಿಸಿ, ಮಹಾರಾಷ್ಟ್ರಾದ ಎಸ್.ಎಂ. ಔತಾಡೆ ಎಂಬುವವರು ಕಾಮಗಾರಿಯ ಗುತ್ತಿಗೆ ಪಡೆದಿದ್ದು, ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳದೆ, ಅಸಡ್ಡೆ ತೋರುತ್ತಿದ್ದಾರೆ, ಹಲವು ಬಾರಿ ನೋಟಿಸ್ ನೀಡಿದರೂ ಉಪಯೋಗವಾಗಿಲ್ಲ ಎಂದರು. ಕೂಡಲೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರ್ಪಡೆಗೊಳಿಸಿ, ಉಳಿದ ಕಾಮಗಾರಿಯನ್ನು ಬೇರೆಯವರಿಗೆ ವಹಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಅಪ್ರಾಪ್ತರು ಟ್ರ್ಯಾಕ್ಟರ್ ಚಾಲನೆ ಮಾಡುವುದನ್ನು ತಪ್ಪಿಸಿ :
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ಅವರು ಮಾತನಾಡಿ, ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರ್ಯಾಲಿಗಳಿಗೆ, ಎತ್ತಿನಗಾಡಿಗಳಿಗೆ ರಿಫ್ಲೆಕ್ಟರ್ ಇಲ್ಲದ ಕಾರಣ ಪ್ರಮುಖ ರಸ್ತೆಗಳಲ್ಲಿ ರಾತ್ರಿ ವೇಳೆ ಅಪಘಾತಗಳು ಸಂಭವಿಸುತ್ತಿವೆ. ಆರ್‍ಟಿಒ ಅಧಿಕಾರಿಗಳು ಈ ಬಗ್ಗೆ ರಸ್ತೆಗಳಲ್ಲಿ ತಪಾಸಣೆ ನಡೆಸಿ, ಟ್ರ್ಯಾಕ್ಟರ್ ಟ್ರ್ಯಾಲಿ ಹಾಗೂ ಎತ್ತಿನ ಗಾಡಿಗಳಿಗೆ ರಿಫ್ಲೆಕ್ಟರ್ ಸ್ಟಿಕರ್‍ಗಳನ್ನು ಅಳವಡಿಸುವ ಕಾರ್ಯ ಆಗಬೇಕು. ಜಿಲ್ಲೆಯಲ್ಲಿ ಅಪ್ರಾಪ್ತ ಹುಡುಗರು, ವಾಹನ ಚಾಲನೆ ಪರವಾನಗಿ ಇಲ್ಲದವರು ಕೂಡ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿರುವುದು ಕಂಡುಬರುತ್ತಿದ್ದು, ಈ ಬಗ್ಗೆ ಪೊಲೀಸರು ಹಾಗೂ ಆರ್‍ಟಿಒ ಅಧಿಕಾರಿಗಳು ನಿಗಾ ವಹಿಸಿ, ತಪ್ಪಿತಸ್ಥರ ಮೇಲೆ ದಂಡ ಹಾಗೂ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಜಿ.ಪಿ. ರೇಣುಪ್ರಸಾದ್ ಸೇರಿದಂತೆ ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













