Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ ಆರೋಪ : ಉಪಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು ದಾಖಲು

---Advertisement---

 

ಬೆಂಗಳೂರು.ಸೆಪ್ಟೆಂಬರ್.11 : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿವೆ ಎಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಗೆ ಆದೇಶಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾದ ಶೂಗಳು ಬಳಸಿದ ಒಂದೇ ವಾರದಲ್ಲಿ ಹರಿದು ಹೋಗುತ್ತಿದ್ದು, ಕಾಲಿಗೆ ಹಾಕಿದ ಕೆಲವೇ ನಿಮಿಷಗಳಲ್ಲಿ ಹೊಲಿಗೆ ಕಿತ್ತುಬರುತ್ತಿವೆ ಎಂದು ವಿವಿಧ ದಿನಪತ್ರಿಕೆಗಳಲ್ಲಿ ವರದಿಯಾಗಿತ್ತು. ಹಿಂದಿನ ವರ್ಷಗಳಿಗಿಂತಲೂ ಈ ಬಾರಿ ಕಳಪೆ ಶೂಗಳನ್ನು ನೀಡಲಾಗಿದ್ದು, ಇದರಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಆರೋಪವೂ ಕೇಳಿಬಂದಿದೆ. ಶಾಲಾ ಮಕ್ಕಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸದಿರುವುದು ಸಂವಿಧಾನದ 21ಎ ವಿಧಿಯ ಉಲ್ಲಂಘನೆ ಹಾಗೂ ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಾದ ನಡವಳಿಕೆ ಎಂದು ಉಪಲೋಕಾಯುಕ್ತರು ಗಂಭೀರವಾಗಿ ಪರಿಗಣಿಸಿದ್ದಾರೆ.

ಉಪಲೋಕಾಯುಕ್ತ-1 ರ ವ್ಯಾಪ್ತಿಗೆ ಒಳಪಡುವ 15 ಜಿಲ್ಲೆಗಳ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ (ಬಿಇಒ) ವಿರುದ್ಧ ದೂರು ದಾಖಲಿಸಲಾಗಿದೆ. ಆಯಾ ಜಿಲ್ಲೆಗಳ ಪೊಲೀಸ್ ಅಧೀಕ್ಷಕರು (ಎಸ್ಪಿ) ಶೂ ಖರೀದಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿ, ಎರಡು ವಾರಗಳ ಒಳಗೆ ಪ್ರಾಥಮಿಕ ತನಿಖಾ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಮತ್ತು ನಿರ್ದೇಶನ ನೀಡುವ ಸಲುವಾಗಿ ಸಂಬಂಧಪಟ್ಟ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಆದೇಶದ ಪ್ರತಿಯನ್ನು ರವಾನಿಸಲು ಸೂಚಿಸಲಾಗಿದೆ. ಅಲ್ಲದೆ, ಗೌರವಾನ್ವಿತ ಮುಖ್ಯಮಂತ್ರಿಗಳ ಗಮನಕ್ಕೂ ತರಲು ಅವರ ಕಚೇರಿಗೂ ಪ್ರತಿಯನ್ನು ಕಳುಹಿಸುವಂತೆ ಉಪಲೋಕಾಯುಕ್ತರು ಆದೇಶಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now