ಬೆಂಗಳೂರು: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಸಾವು ಈಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ಈ ಸಂಬಂಧ ಇದೀಗ ಗೃಹ ಸಚಿವ ಜಿ.ಪರಮೇಶ್ವರ್ ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿಯ ಸಚಿವ ಪ್ರಿಯಾಂಕ್ ಖರ್ಗೆ ಮೇಲೆ ಬಿಜೆಪಿ ಆರೋಪ ಮಾಡಿದೆ. ಇದನ್ನು ಸಿಐಡಿಗೆ ಕೊಡಲಾಗಿದೆ. ಇಂದು ಈ ಬಗ್ಗೆ ಅಧಿಕೃತವಾಗಿ ಆದೇಶ ಹೊರಡಿಸಲಾಗುವುದು. ಸಚಿವರ ಮೇಲೆ ಅನಾವಶ್ಯಕವಾಗಿ ಆರೋಪ ಮಾಡುತ್ತಿರುವುದು ಸರ್ಕಾರಕ್ಕೆ ಸರಿ ಬರಲ್ಲ. ಜೀವ ಕಳೆದುಕೊಂಡವರು ಬರೆದ ಪತ್ರದಲ್ಲಿ ಸಚಿವರ ಹೆಸರು ಕೂಡ ಇಲ್ಲ. ಆದರೂ ಸಚಿವರ ಹೆಸರು ಬಳಸಿಕೊಂಡು ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಏನೆಂದು ತಿಳಿಯಲು ನಾವೂ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಚರ್ಚೆ ಮಾಡಿ ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದೇವೆ. ಬಿಜೆಪಿಗರು ಹೇಳಿದಂತೆ ಎಲ್ಲಾ ಕೇಸನ್ನು ತೆಗೆದುಕೊಂಡು ಹೋಗಿ ಸಿಬಿಐಗೆ ಕೊಡುವುದಕ್ಕೆ ಆಗಲ್ಲ. ಎಲ್ಲದರಲ್ಲೂ ರಾಜಕೀಯ ಮಾಡುವುದಕ್ಕೆ ಹೋಗಬಾರದು ಎಂದಿದ್ದಾರೆ.
ಬಾಲ್ಕಿ ತಾಲೂಕಿನ ಕಟ್ಟಿತೂಗಾಂವ ಗ್ರಾಮದ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಇತ್ತೀಚೆಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲು ಹಳಿಗೆ ತಲೆಕಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಾವಿನ ಸಂಬಂಧ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳುತ್ತಿದ್ದಾರೆ. ಇದರ ನಡುವೆ ಬೀದರ್ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮೃತ ಸಚಿನ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಸ್ಥರಿಗೆ ಸಾಂತ್ವಾನ ಹೇಳಿ, 10 ಲಕ್ಷ ರೂಪಾತಿ ಪರಿಹಾರವನ್ನು ಘೋಷಿಸಿದ್ದಾರೆ.