ಬೆಂಗಳೂರು ಸೆಪ್ಟೆಂಬರ್.10: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೂ. 2,000 ರಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು ರೂ 6,000 ಸಹಾಯಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಯೋಜನೆಯಡಿ ಸಹಾಯಧನ ಪಡೆಯಲು ಇನ್ನು ಮುಂದೆ ರೈತರು ಪ್ರತಿ ವರ್ಷವೂ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಇ-ಕೆವೈಸಿ ಪೂರ್ಣಗೊಳಿಸಲು ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಹಾಗೂ ಮುಖ ಗುರುತಿಸುವಿಕೆ ಆಧಾರಿತ ಇ-ಕೆವೈಸಿ ಎಂಬ ಎರಡು ವಿಧಾನಗಳಿವೆ. ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಮಾಡಿಸಿಕೊಳ್ಳಲು ರೈತರು ಹತ್ತಿರದ ಗ್ರಾಹಕ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಕ್ಕೆ ತೆರಳಿ ಆಧಾರ್ ಕಾರ್ಡ್ ಅಥವಾ ಆಧಾರ್ ಸಂಖ್ಯೆಯ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ.
ಮುಖ ಗುರುತಿಸುವಿಕೆ ಆಧಾರಿತ ಇ-ಕೆವೈಸಿಯನ್ನು ರೈತರು ಸ್ವತಃ ತಮ್ಮ ಮೊಬೈಲ್‌ನಲ್ಲಿ ಪಿಎಂ ಕಿಸಾನ್ ಆಪ್ ಡೌನ್‌ಲೋಡ್ ಮಾಡಿಕೊಂಡು ಮಾಡಿಕೊಳ್ಳಬಹುದಾಗಿದೆ. ಅಲ್ಲದೆ, ಕೃಷಿ ಇಲಾಖೆಯ ವಿಎನ್ಒ (Village Nodal Officer) ಮೊಬೈಲ್ ಆಪ್ ಮೂಲಕವೂ ಇ-ಕೆವೈಸಿ ಮಾಡಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.










