ಹಾಸನ.ಜೂನ್.19: ಬಗರ್ ಹುಕುಂ ಯೋಜನೆಯಡಿ ಸರ್ಕಾರಿ ಜಮೀನುಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಬೇಲೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಜೆಡಿಎಸ್ ನಾಯಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಹಳೇಬೀಡಿನಲ್ಲಿರುವ ಲಿಂಗೇಶ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಿಐಡಿ ತಂಡ, ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ. ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸರ್ಕಾರಿ ಭೂಮಿ ಮಂಜೂರಾತಿಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಆರೋಪ ಈ ಪ್ರಕರಣದ ಕೇಂದ್ರಬಿಂದುವಾಗಿದೆ.
ಕೋಲಾರದ ಸಾಮಾಜಿಕ ಕಾರ್ಯಕರ್ತ ರಮೇಶ್ ಕುಮಾರ್ ಅವರು ಸಲ್ಲಿಸಿದ ದೂರಿನ ಪ್ರಕಾರ, 2016ರಿಂದ 2022ರ ಅವಧಿಯಲ್ಲಿ ಸುಮಾರು 2,750 ಎಕರೆ ಸರ್ಕಾರಿ ಜಮೀನನ್ನು ನಿಯಮಗಳನ್ನು ಉಲ್ಲಂಘಿಸಿ ಮಂಜೂರು ಮಾಡಲಾಗಿದೆ ಎನ್ನಲಾಗಿದೆ. ಈ ಸಂಬಂಧ ಮೊದಲಿಗೆ ಬೇಲೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ನಂತರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು.ಪ್ರಕರಣ ರದ್ದುಗೊಳಿಸುವಂತೆ ಕೋರಿ ಲಿಂಗೇಶ್ ಹಾಗೂ ಇತರರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಇದೀಗ ಸಿಐಡಿ ಅಧಿಕಾರಿಗಳು ನೇರ ಕ್ರಮ ಕೈಗೊಂಡಿದ್ದಾರೆ.















