ದಾವಣಗೆರೆಯಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣವನ್ನು ಹೈಕೋರ್ಟ್ ಸಂಚಾರಿ ಪೀಠಕ್ಕಾಗಿ ಮೀಸಲಿಡಬೇಕು ಹಾಗೂ ಪ್ರಸ್ತುತ ಜಿಲ್ಲಾ ನ್ಯಾಯಾಲಯದ ಆವರಣದಲ್ಲೇ ಹೊಸ ಕಟ್ಟಡಗಳನ್ನು ನಿರ್ಮಿಸಬೇಕು ಎಂದು ವಕೀಲರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಹಿರಿಯ ವಕೀಲರು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ರವಿ ವಿ. ಹೊಸಮನಿ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ಕಕ್ಷಿದಾರರು ಮತ್ತು ವಕೀಲರ ಹಿತದೃಷ್ಟಿಯಿಂದ ಈ ಬೇಡಿಕೆಗೆ ಸ್ಪಂದಿಸುವಂತೆ ಮನವಿ ಮಾಡಿದ ಅವರು, ನಾಡಿನ ಕೇಂದ್ರ ಭಾಗದಲ್ಲಿರುವ ದಾವಣಗೆರೆ ಎರಡನೇ ರಾಜಧಾನಿಯಾಗುವ ಎಲ್ಲಾ ಅರ್ಹತೆಗಳನ್ನು ಹೊಂದಿದೆ ಎಂದು ಅಭಿಪ್ರಾಯಪಟ್ಟರು.

ಚಿತ್ರದುರ್ಗ, ವಿಜಯನಗರ, ಬಳ್ಳಾರಿ, ಹಾವೇರಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವಕೀಲರು ಮತ್ತು ಸಾರ್ವಜನಿಕರಿಗೂ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ವಿವರಿಸಿದರು.
ತುಂಗಭದ್ರಾ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ನ್ಯಾಯಾಲಯ ಸಂಕೀರ್ಣವು ಏಷ್ಯನ್ ಹೆದ್ದಾರಿಗೆ ಹೊಂದಿಕೊಂಡಿದ್ದು, ಸಮೀಪದಲ್ಲೇ ರಾಜ್ಯ ಹೆದ್ದಾರಿಯೂ ಇರುವುದರಿಂದ ಬೆಂಗಳೂರು ಹಾಗೂ ಧಾರವಾಡ ಹೈಕೋರ್ಟ್‌ಗಳಿಗೆ ಸಂಪರ್ಕ ಸುಲಭವಾಗಲಿದೆ ಎಂದು ವಕೀಲರು ತಿಳಿಸಿದರು. ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಿಂದ ಹೈಕೋರ್ಟ್‌ಗಳ ಮೇಲಿನ ಕಾರ್ಯಭಾರದ ಒತ್ತಡವೂ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ, ನಿರ್ಮಾಣ ಹಂತದಲ್ಲಿರುವ ನ್ಯಾಯಾಲಯ ಕಟ್ಟಡದ ಕಾಮಗಾರಿಯ ಗುಣಮಟ್ಟ ಹಾಗೂ ಮೂಲ ನೀಲನಕ್ಷೆ ಕುರಿತು ಆಕ್ಷೇಪ ವ್ಯಕ್ತಪಡಿಸಿದ ವಕೀಲರು, ಈ ಹಿಂದೆ ನೀಲನಕ್ಷೆ ಬದಲಾವಣೆಗಾಗಿ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸದೆ ಕಾಮಗಾರಿ ಮುಂದುವರಿಸಲಾಗಿದೆ ಎಂದು ದೂರಿದರು.ನಗರದ ಮಧ್ಯಭಾಗದಲ್ಲಿರುವ ಎಪಿಎಂಸಿ ಸಮೀಪದ ಹಳೆಯ ಪಿ.ಬಿ. ರಸ್ತೆಯ ಪಕ್ಕದಲ್ಲಿ ಜಿಲ್ಲಾ ನ್ಯಾಯಾಲಯದ ಹೊಸ ಕಟ್ಟಡ ನಿರ್ಮಿಸುವಂತೆ ಸಲ್ಲಿಸಿದ್ದ ಮನವಿಯನ್ನೂ ಅಧಿಕಾರಿಗಳು ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ವಕೀಲರ ಸಂಘದ ಜಿಲ್ಲಾ ಘಟಕದ ನಿಕಟ ಪೂರ್ವ ಅಧ್ಯಕ್ಷ ಎಲ್.ಎಚ್. ಅರುಣಕುಮಾರ್, ಮಾಜಿ ಪ್ರಧಾನ ಕಾರ್ಯದರ್ಶಿ ಎಸ್. ಬಸವರಾಜ, ಲಕ್ಕಪ್ಪ, ಬಸವರಾಜ ಉಚ್ಚಂಗಿದುರ್ಗ, ಸಂತೋಷ, ರವಿಶಂಕರ್ ತಿಮ್ಲಾಪುರ, ಚಂದ್ರಶೇಖರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













