ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ : ಸಿ.ಎಂ.ಸಿದ್ದರಾಮಯ್ಯ

suddionenews
3 Min Read

ಶಿಗ್ಗಾವಿ, ನವೆಂಬರ್. 05: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.‌

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಗೆಲುವಿಗೆ ಪ್ರಚಾರ ಕೈಗೊಂಡು ಮಾತನಾಡಿದರು.

ಮೋದಿ ಮಹಾನ್ ಸುಳ್ಳುಗಾರ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಎಂದು ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಬಾಯಿ ಬಾಯಿ ಆಗಿದ್ದಾರೆ ಎಂದರು.

ಮುಖ್ಯಮಂತ್ರಿಗಳ ಮಾತಿನ ಮುಖ್ಯಾಂಶಗಳು ಈ ಕೆಳಕಂಡಂತೆ ನೀಡಲಾಗಿದೆ.

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅಭ್ಯರ್ಥಿಯನ್ನು ಆರಿಸುವ ಮತ್ತೊಂದು ಅವಕಾಶ ಶಿಗ್ಗಾವಿ ಕ್ಷೇತ್ರದ ಜನತೆಗೆ ಸಿಕ್ಕಿದೆ.

ಇಲ್ಲಿನ‌ ಬಿಜೆಪಿ ಅಭ್ಯರ್ಥಿ ಅತ್ಯಂತ ಶ್ರೀಮಂತ ಕುಟುಂಬದಿಂದ ಬಂದವರು. ಅವರಿಗೆ ಹಳ್ಳಿ ಬದುಕು ಗೊತ್ತಿಲ್ಲ. ಬಡವರ ಬದುಕು ಗೊತ್ತಿಲ್ಲ. ಆದರೆ ಕಾಂಗ್ರೆಸ್ ಅಭ್ಯರ್ಥಿ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದು ಬಡವರ ಕಷ್ಟ, ಸುಖ ಗೊತ್ತಿರುವವರು‌. ಇವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ.

ನರೇಂದ್ರ ಮೋದಿ ಕುಟುಂಬ ರಾಜಕಾರಣದ ಬಗ್ಗೆ ಭರ್ಜರಿ ಭಾಷಣ ಮಾಡ್ತಾರೆ. ಆದರೆ ಇಲ್ಲಿ ಮಾಜಿ ಮುಖ್ಯಮಂತ್ರಿಯ ಮೊಮ್ಮಗ, ಮಾಜಿ ಮುಖ್ಯಮಂತ್ರಿಯ ಮಗನಿಗೆ ಟಿಕೆಟ್ ನೀಡಿದ್ದಾರೆ. ಇದು ಕುಟುಂಬ ರಾಜಕಾರಣ ಅಲ್ಲವೇ ಮೋದಿ ಯವರೇ?

ನಾನು ನಾಡಿನ ಜನತೆಯ ಪ್ರೀತಿ, ಆಗ್ರಹಗಳಿಗೆ ಬಗ್ಗುತ್ತೇನೆಯೇ ಹೊರತು, ಬಿಜೆಪಿ ಮತ್ತು ದೇವೇಗೌಡರ ಷಡ್ಯಂತ್ರಗಳಿಗೆ ಬಗ್ಗದೂ ಇಲ್ಲ. ಜಗ್ಗದೂ ಇಲ್ಲ. ಎಲ್ಲಿಯವರೆಗೂ ರಾಜ್ಯದ ಜನರ ಆಶೀರ್ವಾದ ಇರುತ್ತದೋ ಅಲ್ಲಿಯವರೆಗೂ ನಾನು ಬಿಜೆಪಿ ಕುತಂತ್ರಗಳಿಗೆ ಬಗ್ಗುವುದಿಲ್ಲ.

40 ವರ್ಷಗಳಿಂದ ನಾನು ಮಂತ್ರಿಯಾಗಿದ್ದೀನಿ. ಮುಖ್ಯಮಂತ್ರಿಯಾಗಿದ್ದೀನಿ. ಸಣ್ಣ ಕಪ್ಪು ಚುಕ್ಕೆ ಕೂಡ ನನ್ನ ಮೇಲಿಲ್ಲ. ಆದರೂ ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡಿ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ.

ಕೇವಲ 14 ಸೈಟುಗಳಿಗಾಗಿ ನಾನು ತಪ್ಪು ಮಾಡ್ತೀನಾ? ದುಡ್ಡು ಮಾಡಬೇಕು ಎಂದಿದ್ದರೆ ಬೇಕಾದಷ್ಟು ಮಾಡಬಹುದಿತ್ತು. ಆದರೆ ನನ್ನ ತಪ್ಪುಗಳು ಏನೇನೂ ಇಲ್ಲದ ಕಾರಣದಿಂದ ಸುಳ್ಳು ಆರೋಪ ಹೊರಿಸಿ ಷಡ್ಯಂತ್ರ ಹೆಣೆದು ನನ್ನನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ಗ್ಯಾರಂಟಿ ನನಗಿದೆ.

ಚೆಕ್ ನಲ್ಲಿ ಲಂಚ ಪಡೆದ ವಿಜಯೇಂದ್ರ ಈಗ ನನ್ನ ಬಗ್ಗೆ ಮಾತಾಡುತ್ತಿದ್ದಾರೆ. ವಿಜಯೇಂದ್ರ ಹೇಗೆ ದುಡ್ಡು ಹೊಡ್ಕಂಡು ಕೂತಿದ್ದ ಎನ್ನುವುದನ್ನು ಅವರದೇ ಪಕ್ಷದ ಯತ್ನಾಳ್, ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ ಕೇಳಿ.

ಚೆಕ್ ನಲ್ಲಿ ಲಂಚ ಪಡೆದ ವಿಜಯೇಂದ್ರ ಒಂದು ಕಡೆ, ಲೂಟಿ ರವಿ ಮತ್ತೊಂದು ಕಡೆ ನಮ್ಮ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಇವರ ಯೋಗ್ಯತೆ ನಾಡಿನ ಜನತೆಗೆ ಗೊತ್ತಿದೆ.

ಅಧಿಕಾರ ಇದ್ದಾಗ ಕೇವಲ ಭ್ರಷ್ಟಾಚಾರ ಆಚರಿಸಿ, ಹಣ ಲೂಟಿ ಮಾಡಿ ಮನೆಗೆ ಹೋದರು. ಈಗ ಜಾತಿ-ಧರ್ಮದ ಹೆಸರಿನಲ್ಲಿ ಬಡವರನ್ನು ಪರಸ್ಪರ ಎತ್ತಿ ಕಟ್ಟಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.

ನಾವು ಹಿಂದೆಯೂ ಅಷ್ಟೆ, ಈಗಲೂ ಅಷ್ಟೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನುಡಿದಂತೆ ನಡೆದ ನೈತಿಕತೆ ಆಧಾರದಲ್ಲಿ‌ ಮತ್ತೆ ಜನರ ಬಳಿಗೆ ಬಂದು ಮತ ಕೇಳುತ್ತಿದ್ದೇವೆ. ಬಸವರಾಜ ಬೊಮ್ಮಾಯಿ ಅವರು ಅವರ ಮಗನಿಗೆ ಓಟು ಕೇಳಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಮಾತೆತ್ತಿದರೆ ದಮ್ಮು, ತಾಖತ್ತು ಎನ್ನುವ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕಾಗಲಿ, ಕ್ಷೇತ್ರಕ್ಕಾಗಲಿ ಏನು ಕೊಟ್ಟಿದ್ದಾರೆ ಹೇಳಿ‌.

ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ಇಡೀ ರಾಜ್ಯದ ಮಹಿಳೆಯರಿಗೆ ಆರ್ಥಿಕ‌ ಶಕ್ತಿ ನೀಡಿದ್ದೇವೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದ ಬಡವರ ಖಾತೆಗಳಿಗೆ ನೇರವಾಗಿ 56 ಸಾವಿರ ಕೋಟಿ ರೂಪಾಯಿಯನ್ನು ಹಾಕಿದ್ದೇವೆ.

ಬಸವರಾಜ ಬೊಮ್ಮಾಯಿಯನ್ನು ಶಕುನಿ ಎಂದು ಈಗಷ್ಟೆ ಎಲ್ಲಾ ಹೇಳಿದರು. ಒಳ ಒಪ್ಪಂದ ಮಾಡಿಕೊಂಡು ರಾಜಕಾರಣ ಮಾಡುವ ಬೊಮ್ಮಾಯಿ ಅಂತವರು ರಾಜಕಾರಣದಲ್ಲಿ ಇರಬಾರದು.

ಆದ್ದರಿಂದ ಪಠಾಣ್ ಅವರನ್ನು ಗೆಲ್ಲಿಸಿ ಕಳುಹಿಸಿ. ಅಜ್ಜಂಪೀರ್ ಖಾದ್ರಿ ಅವರಿಗೂ ಒಳ್ಳೆಯ ಅವಕಾಶ ಕಲ್ಪಿಸುತ್ತೇನೆ.

ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಈ ಬಾರಿ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆಲ್ಲುವುದು ಅಷ್ಟೇ ಸತ್ಯ. ಇಲ್ಲಿ ಕಾಂಗ್ರೆಸ್ ಗೆದ್ದರೆ ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ಬರುತ್ತದೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *