ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಸದಸ್ಯರು, ವಿಶೇಷ ಆಹ್ವಾನಿತರು, ಖಾಯಂ ಆಹ್ವಾನಿತರನ್ನು ನೇಮಿಸಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ಕರ್ನಾಟಕದಿಂದ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ನೇಮಿಸಲಾಗಿದೆ. ರಾಜ್ಯದವರಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿರುವ ಸಿ.ಟಿ.ರವಿ, ವಿಶೇಷ ಆಹ್ವಾನಿತರಾಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್, ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಮತ್ತು ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಜಗದೀಶ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ, ರಾಜ್ಯ ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಗೋವಿಂದ ಕಾರಜೋಳ, ಡಾ. ಸಿ.ಎನ್.ಅಶ್ವತ್ಥನಾರಾಯಣ್ ಮತ್ತು ಮಾಜಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ಆಹ್ವಾನಿತರಾಗಿರುವರು.
ಶಾಸಕಾಂಗ ಪಕ್ಷದ ನಾಯಕರು ಮತ್ತು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪಕ್ಷದ ಕಾರ್ಯಕಾರಿ ಸಮಿತಿಗೆ ಆಹ್ವಾನಿತರಾಗಿರುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.