ದಾವಣಗೆರೆ, (ಮಾ.04): ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ದಾವಣಗೆರೆಯಲ್ಲಿಂದು ಮೊದಲ ಚುನಾವಣಾ ರ‌್ಯಾಲಿಯನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್ ಸರ್ಕಾರ ಆಡಳಿತದಲ್ಲಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಎಎಪಿಗೆ ಅವಕಾಶ ನೀಡಿದರೆ ಐದು ವರ್ಷಗಳ ಕಾಲ ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ಭರವಸೆ ನೀಡಿದರು. ದೆಹಲಿಯಂತೆ ಕರ್ನಾಟಕದ ಜನತೆಗೆ ಉಚಿತ ವಿದ್ಯುತ್, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರಿಂದ ಲೋಕಾಯುಕ್ತ ಅಧಿಕಾರಿಗಳು ರೂ.8.23 ಕೋಟಿ ಅಕ್ರಮ ನಗದು ವಶಪಡಿಸಿಕೊಂಡಿರುವ ಸಂಗತಿಯನ್ನು ಕೇಜ್ರಿವಾಲ್ ಪ್ರಸ್ತಾಪಿಸಿದರು.
ಭ್ರಷ್ಟಾಚಾರದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆಡಳಿತ ಪಕ್ಷದ ನಾಯಕನ ವಿರುದ್ಧ ಬಿಜೆಪಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ ಎಂದು ಕಿಡಿಕಾರಿದರು.
ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ರಾಜ್ಯದ ಸಚಿವರು ಶೇ.40 ಕಮಿಷನ್ ಕೇಳುತ್ತಿದ್ದಾರೆ ಎಂದು ಕೇಜ್ರಿವಾಲ್ ನೆನಪಿಸಿದರು.
ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಳ್ಳುವ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ದುಪ್ಪಟ್ಟಾಗಿದೆ ಎಂದು ದೂರಿದರು. ರಾಜ್ಯದ ಜನತೆ ಎಎಪಿಗೆ ಅಧಿಕಾರ ಕೊಟ್ಟರೆ ಪ್ರಾಮಾಣಿಕ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ ಎಂದರು.


