ಭಿಂಡ್ (ಮಧ್ಯಪ್ರದೇಶ).ಆಗಸ್ಟ್.18: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ವ್ಯಾಪ್ತಿಗೆ ಬರುವ ಭಿಂಡ್-ಗ್ವಾಲಿಯರ್ ರಾಷ್ಟ್ರೀಯ ಹೆದ್ದಾರಿ-719ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪಿಕಪ್ ವಾಹನ ಮತ್ತು ಡಂಪರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎಂಟು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 32ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೋಮವಾರ ತಡರಾತ್ರಿ ಸುಮಾರು 1 ಗಂಟೆಯ ಸುಮಾರಿಗೆ ಛೀಮ್ಕಾ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಉತ್ತರ ಪ್ರದೇಶದ ಲಖೀಂಪುರ ಖೇರಿ ಜಿಲ್ಲೆಯ ಕಾರ್ಮಿಕರು ಭತ್ತ ನಾಟಿ ಕೆಲಸ ಮುಗಿಸಿ ಪಿಕಪ್ ವಾಹನದಲ್ಲಿ ತಮ್ಮ ಊರಿಗೆ ಮರಳುತ್ತಿದ್ದ ವೇಳೆ ವೇಗವಾಗಿ ಬಂದ ಡಂಪರ್ಗೆ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಹೆದ್ದಾರಿಯಲ್ಲಿ ಕುಳಿತಿದ್ದ ಜಾನುವಾರುಗಳ ಹಿಂಡನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಗೋಹದ್ ಚೌರಾಹಾ ಠಾಣಾ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಸಮೀಪದ ಗೋಹದ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಗ್ವಾಲಿಯರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಅಪಘಾತದ ಬಳಿಕ ಹೆದ್ದಾರಿಯಲ್ಲಿ ಉಂಟಾಗಿದ್ದ ಸಂಚಾರ ದಟ್ಟಣೆಯನ್ನು ಪೊಲೀಸರು ವಾಹನಗಳನ್ನು ತೆರವುಗೊಳಿಸುವ ಮೂಲಕ ಸುಗಮಗೊಳಿಸಿದ್ದಾರೆ.









