ಬೆಂಗಳೂರು.ಆಗಸ್ಟ್.19: ಕರ್ನಾಟಕದ ಮಾಜಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮತ್ತು ತಿಪಟೂರು ಕ್ಷೇತ್ರದ ಮಾಜಿ ಶಾಸಕರಾದ ಬಿ.ಸಿ. ನಾಗೇಶ್ ಅವರು ಮಂಗಳವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕಳೆದ ಸುಮಾರು ಒಂದು ವರ್ಷದಿಂದ ತೀವ್ರ ಮಿದುಳಿನ ಗಡ್ಡೆ (ಬ್ರೈನ್ ಟ್ಯೂಮರ್) ಸಮಸ್ಯೆಯಿಂದ ಬಳಲುತ್ತಿದ್ದ 67 ವರ್ಷದ ನಾಗೇಶ್ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿದ್ದ ತಮ್ಮ ಪುತ್ರಿಯ ನಿವಾಸದಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ (ಆಗಸ್ಟ್ 18) ಕೊನೆಯುಸಿರೆಳೆದರು. ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪೂರ್ಣಾವಧಿ ಕಾರ್ಯಕರ್ತರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಬಿ.ಸಿ. ನಾಗೇಶ್ ಅವರು ನಂತರ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ್ದರು. ತಿಪಟೂರು ವಿಧಾನಸಭಾ ಕ್ಷೇತ್ರದಿಂದ 2008 ಹಾಗೂ 2018ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಇವರು, ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ (2021-2023) ಶಿಕ್ಷಣ ಸಚಿವರಾಗಿ ಪ್ರಮುಖ ಜವಾಬ್ದಾರಿ ನಿರ್ವಹಿಸಿದ್ದರು.
ಮೃತರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ವಿಧಿವಿಧಾನಗಳು ಬುಧವಾರ (ಆಗಸ್ಟ್ 19) ಅವರ ಸ್ವಂತ ಊರಾದ ತಿಪಟೂರಿನಲ್ಲಿ ನೆರವೇರಲಿವೆ.
ಬಿ.ಸಿ.ನಾಗೇಶ್ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸಂತಾಪ
ಬಿ.ಸಿ.ನಾಗೇಶ್ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದು, ಮಾಜಿ ಸಚಿವರು ಹಾಗೂ ಹಿರಿಯ ನಾಯಕರಾದ ಶ್ರೀ ಬಿ.ಸಿ. ನಾಗೇಶ್ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.











