ಬೆಳಗಾವಿ.ಸೆಪ್ಟೆಂಬರ್.15: ನಗರದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ದುರ್ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೆಳಗಾವಿಯ ಚಾವ್ಹಾಟ್ ಗಲ್ಲಿಯಲ್ಲಿ ಈ ದುರಂತ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಗ್ನಿ ಅವಘಡದಲ್ಲಿ ಮೃತಪಟ್ಟವರನ್ನು ಗಜಾನನ ರಾಜಾರಾಮ ದಮೋನೆ (65), ಶರದಾ ದಮೋನೆ (45), ಪ್ರಿಯಾ ಗಜಾನನ ದಮೋನೆ (28) ಹಾಗೂ ಗಂಗಾ ಗಜಾನನ (25) ಎಂದು ಗುರುತಿಸಲಾಗಿದೆ.
ಮನೆಯೊಳಗೆ ಬೆಂಕಿ ವೇಗವಾಗಿ ವ್ಯಾಪಿಸಿದ್ದರಿಂದ ನಾಲ್ವರು ಹೊರಬರಲಾಗದೆ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.











