Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಆಳಂದ ಗಲಭೆ ಪ್ರಕರಣ ವಾಪಸಾತಿ: ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ಮನವಿ

---Advertisement---

ಸುದ್ದಿಒನ್,ಬೆಂಗಳೂರು,ಜೂನ್.02: ಕಲಬುರಗಿ ಜಿಲ್ಲೆಯ ಆಳಂದದಲ್ಲಿ 2022ರಲ್ಲಿ ನಡೆದಿದ್ದ ರಾಘವ ಚೈತನ್ಯ ಶಿವಲಿಂಗ ಪೂಜೆ ಸಂದರ್ಭದ ಕೋಮು ಗಲಭೆಗೆ ಸಂಬಂಧಿಸಿದ 7 ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಕೈಗೊಂಡಿರುವ ಸಚಿವ ಸಂಪುಟದ ತೀರ್ಮಾನವನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕಲಬುರಗಿ ಗ್ರಾಮಾಂತರ ಜಿಲ್ಲಾ ಬಿಜೆಪಿ ವತಿಯಿಂದ ಕರ್ನಾಟಕದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.

ಇಂದು ಕಲಬುರಗಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಅಶೋಕ್ ಬಗಲಿ ಅವರ ನೇತೃತ್ವದಲ್ಲಿ ರಾಜಭವನಕ್ಕೆ ಭೇಟಿ ನೀಡಿ ಈ ಅಧಿಕೃತ ಮನವಿ ಪತ್ರವನ್ನು ಹಸ್ತಾಂತರಿಸಲಾಯಿತು.

ಹೈಕೋರ್ಟ್ ಆದೇಶದಂತೆ ಕಟ್ಟುನಿಟ್ಟಾದ ಭದ್ರತೆಯಲ್ಲಿ ನಡೆದಿದ್ದ ರಾಘವ ಚೈತನ್ಯ ಶಿವಲಿಂಗ ಪೂಜೆಯ ಸಂದರ್ಭದಲ್ಲಿ, ಸೆಕ್ಷನ್ 144 ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಕಾನೂನುಬಾಹಿರವಾಗಿ ಗುಂಪುಗೂಡಿ ದಾಂಧಲೆ ನಡೆಸಲಾಗಿತ್ತು. ಈ ಗಲಭೆಗೆ ಸಂಬಂಧಿಸಿದ ಕ್ರೈಂ ನಂಬರ್ 25/2022 ರಿಂದ 30/2022 ಮತ್ತು 38/2022 ರವರೆಗಿನ ಪ್ರಕರಣಗಳನ್ನು ವಾಪಸ್ ಪಡೆಯಲು ಸರ್ಕಾರ ಮುಂದಾಗಿರುವುದು ಹೈಕೋರ್ಟ್‌ನ ತತ್ವಗಳಿಗೆ ವಿರುದ್ಧವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಗಲಭೆಯ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ನಾಶಪಡಿಸಿದ್ದಲ್ಲದೆ, ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಹಾಗೂ ಸರ್ಕಾರಿ ಅಧಿಕಾರಿಗಳ ಮೇಲೆ ಗಂಭೀರವಾಗಿ ಹಲ್ಲೆ ನಡೆಸಲಾಗಿತ್ತು. ಇಂತಹ ದೇಶದ್ರೋಹಿ ಮತ್ತು ಸಮಾಜವಿರೋಧಿ ಶಕ್ತಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುತ್ತಿರುವುದು ಕಾನೂನು ಸುವ್ಯವಸ್ಥೆಗೆ ಮಾರಕವಾಗಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣಕ್ಕಾಗಿ ರಾಜ್ಯ ಸರ್ಕಾರವು ಈ ತೀರ್ಮಾನ ಕೈಗೊಂಡಿದೆ. ಇದು ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯ ಸ್ವಾಯತ್ತತೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಬಗೆದ ದ್ರೋಹವಾಗಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (CrPC) ಸೆಕ್ಷನ್ 321ರ ಅಡಿಯಲ್ಲಿ ಪ್ರಕರಣಗಳನ್ನು ಹಿಂಪಡೆಯುವಾಗ ಪಬ್ಲಿಕ್ ಪ್ರಾಸಿಕ್ಯೂಟರ್ ಸ್ವತಂತ್ರವಾಗಿ ಯೋಚಿಸಬೇಕೆಂಬ ಹೈಕೋರ್ಟ್‌ನ ಮಹತ್ವದ ತೀರ್ಪನ್ನು (ಗಿರೀಶ್ ಭರದ್ವಾಜ್ ವಿರುದ್ಧ ಕರ್ನಾಟಕ ಸರ್ಕಾರ – 2025) ಇಲ್ಲಿ ಸಂಪೂರ್ಣವಾಗಿ ಗಾಳಿಗೆ ತೂರಲಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ.

ಆಳಂದ ಗಲಭೆಯ 7 ಗಂಭೀರ ಪ್ರಕರಣಗಳನ್ನು ಹಿಂಪಡೆಯಲು ಅನುಮೋದನೆ ನೀಡಿರುವ ಸಚಿವ ಸಂಪುಟದ ನಿರ್ಧಾರವನ್ನು ರಾಜ್ಯಪಾಲರು ತಕ್ಷಣವೇ ವಜಾಗೊಳಿಸಬೇಕು ಮತ್ತು ಹಿಂಪಡೆಯಬೇಕು. ಈ ಪ್ರಕರಣಗಳಿಂದ ತೊಂದರೆಗೊಳಗಾದ ಸಂತ್ರಸ್ತರು ಮತ್ತು ಭಕ್ತಾದಿಗಳ ಹಿತಾಸಕ್ತಿ ಹಾಗೂ ಅಭಿಪ್ರಾಯಗಳನ್ನು ಸರ್ಕಾರ ಕಡ್ಡಾಯವಾಗಿ ಪರಿಗಣಿಸುವಂತೆ ಸೂಚಿಸಬೇಕು. ಹೈಕೋರ್ಟ್ ನಿಗದಿಪಡಿಸಿರುವ ಕಾನೂನು ಚೌಕಟ್ಟನ್ನು ಮರುಪರಿಶೀಲಿಸುವವರೆಗೆ ಈ ನಿರ್ಧಾರಕ್ಕೆ ಸಂಬಂಧಿಸಿದಂತೆ ಯಾವುದೇ ಮುಂದಿನ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.

Join WhatsApp

Join Now

Join Telegram

Join Now