ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ (KDP) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು, ವಿವಿಧ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು 10 ರಿಂದ 15 ಸಾವಿರ ರೂಪಾಯಿವರೆಗೆ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಗಂಭೀರ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಶಾಸಕರು, ಜಿಲ್ಲಾ ಸರ್ಜನ್ ಡಾ. ರವೀಂದ್ರ ಅವರನ್ನು ಸಭೆಗೆ ಕರೆಸಿ ತೀವ್ರ ತರಾಟೆಗೆ ತೆಗೆದುಕೊಂಡರು. ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಹಣ ಪಡೆಯುವುದು, ಹಣ ಕೊಟ್ಟವರಿಗೆ ಮಾತ್ರ ತುರ್ತು ಚಿಕಿತ್ಸೆ ನೀಡುವುದು ಹಾಗೂ ಬಿಪಿಎಲ್ ಕಾರ್ಡ್ ಇದ್ದವರಿಗೆ ಎಂಆರ್ ಐ (MRI) ಸ್ಕ್ಯಾನಿಂಗ್ ಗೆ ಆದ್ಯತೆ ಕೊಡುವುದು ಅತ್ಯಂತ ಗಂಭೀರ ವಿಷಯವಾಗಿದೆ. ಬಡವರ ಆರೋಗ್ಯದೊಂದಿಗೆ ಚೆಲ್ಲಾಟ ಆಡುವುದನ್ನು ನಾನು ಸಹಿಸುವುದಿಲ್ಲ. ಬಡವರಿಗೆ ಸೇವೆ ಮಾಡುವ ಮನೋಭಾವನೆಯನ್ನು ಜಿಲ್ಲಾ ಸರ್ಜನ್ ವೃತ್ತಿಯಲ್ಲಿರುವವರು ಬೆಳೆಸಿಕೊಳ್ಳಬೇಕು. ವೈದ್ಯಾಧಿಕಾರಿಗಳೇ ನಿಮ್ಮ ಮಾತನ್ನು ಕೇಳುವುದಿಲ್ಲ ಎಂದರೆ ಸಾಮಾನ್ಯ ಜನರ ಗತಿ ಏನು ಎಂದು ಎಚ್ಚರಿಸಿದರು.

ಹೆರಿಗೆ ಮಾಡಿಸಲು ಮಹಿಳೆಯರನ್ನು ಎರಡರಿಂದ ಮೂರು ದಿನ ಕಾಯಿಸಿ, ಹಣ ನೀಡಿದ ಮೇಲಷ್ಟೇ ಹೆರಿಗೆ ಮಾಡಿಸುತ್ತಾರೆ ಎಂಬ ಆರೋಪಗಳು ಕೇಳಿಬಂದಿವೆ. ಬಡವರಿಗೆ ಉಚಿತ ಮತ್ತು ಗುಣಮಟ್ಟದ ಸೇವೆ ಸಿಗಬೇಕು. ಆದರೆ ಕೆಲ ವೈದ್ಯರು ಖಾಸಗಿ ಆಸ್ಪತ್ರೆಗಳತ್ತ ಹೆಚ್ಚು ಆಸಕ್ತಿ ತೋರುತ್ತಿದ್ದು, ಬಡವರ ಸೇವೆಗೆ ಆದ್ಯತೆ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದೇ ವೇಳೆ ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಹಾಗೂ ಚಿಕಿತ್ಸೆಯ ಕೊರತೆ ಉಂಟಾಗದಂತೆ ನೋಡಿಕೊಳ್ಳಲು ಮತ್ತು ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆ ಇರುವವರನ್ನು ಗುರುತಿಸಿ ಸರ್ಕಾರದಿಂದ ಸಮರ್ಪಕ ಚಿಕಿತ್ಸೆ ಕೊಡಿಸಲು ವೈದ್ಯಾಧಿಕಾರಿ ಡಾ. ಗಿರೀಶ್ ಅವರಿಗೆ ಸೂಚಿಸಿದರು.

ಕುಡಿಯುವ ನೀರು ಮತ್ತು ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ನಿರ್ದೇಶನ :
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮುಂದುವರಿದಿದ್ದು, ಅಧಿಕಾರಿಗಳು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸಮಸ್ಯೆ ಬಗೆಹರಿಸಬೇಕು. ಗ್ರಾಮಗಳಲ್ಲಿ ಚಾಲ್ತಿಯಲ್ಲಿರುವ ಬೋರ್ವೆಲ್ಗಳಿಗೆ ಬೆಸ್ಕಾಂ (BESCOM) ಅಧಿಕಾರಿಗಳು ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ಅವಶ್ಯಕತೆ ಇರುವ ಗ್ರಾಮಗಳ ವರದಿ ನೀಡಿದರೆ ಡಿಎಂಎಫ್ (DMF) ಯೋಜನೆಯಡಿ ಹೊಸ ಘಟಕ ಸ್ಥಾಪಿಸುವುದಾಗಿ ತಿಳಿಸಿದರು. ಜಲ ಜೀವನ್ ಮಿಷನ್ (JJM) ಕಾಮಗಾರಿಗಳಲ್ಲಿ ನಿರ್ಲಕ್ಷ್ಯ ವಹಿಸಿರುವ ಗುತ್ತಿಗೆದಾರರಿಗೆ ನೋಟಿಸ್ ನೀಡಿ, ಕಳಪೆ ಕಾಮಗಾರಿ ನಡೆಸಿದವರ ಬಿಲ್ ಪಾವತಿಸದಂತೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೃಷಿ ಹೊಂಡ ಅಕ್ರಮ ಮತ್ತು ರೈತರ ಸಮಸ್ಯೆಗಳು :
ರೈತರ ಹೆಸರಿನಲ್ಲಿ ಇತರರು ಕೃಷಿ ಹೊಂಡಗಳನ್ನು ನಿರ್ಮಿಸಿ, ಸರ್ಕಾರದಿಂದ ಬರುವ ಅನುದಾನ ಪಡೆದು ಅವುಗಳನ್ನು ಸಮರ್ಪಕವಾಗಿ ಬಳಸದೆ ಮುಚ್ಚಿಸುತ್ತಿರುವುದು ಸರ್ಕಾರಕ್ಕೆ ಮಾಡುತ್ತಿರುವ ದ್ರೋಹವಾಗಿದೆ. ಇಂತಹ ಕೆಲಸ ಮರುಕಳಿಸದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಕ್ಷೇತ್ರದ 56 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕೇವಲ 26 ಸಾವಿರ ಹೆಕ್ಟೇ ರ್ನಲ್ಲಿ ಮಾತ್ರ ಬಿತ್ತನೆಯಾಗಿರುವುದು ಆತಂಕಕಾರಿ. ಹಿರೇಗುಂಟನೂರು ಮತ್ತು ಭರಮಸಾಗರ ಹೋಬಳಿಗಳಲ್ಲಿ ಮೆಕ್ಕೆಜೋಳ ಹಾಗೂ ತುರುವನೂರು ಭಾಗದಲ್ಲಿ ಸೂರ್ಯಕಾಂತಿ ಬೆಳೆ ಬಿತ್ತನೆ ನಡೆಯುತ್ತಿದ್ದು, ಬೆಳೆ ಸಮೀಕ್ಷೆ ಸರಿಯಾಗಿ ನಡೆಸಿ ರೈತರಿಗೆ ವಿಮೆ ಸೌಲಭ್ಯ ಸಿಗುವಂತೆ ಜಾಗೃತಿ ಮೂಡಿಸಬೇಕು. ಯೂರಿಯಾ ಗೊಬ್ಬರವನ್ನು ಎಂಆರ್ಪಿ (MRP) ಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಅಂತಹ ಅಂಗಡಿಗಳ ಪರವಾನಗಿ ರದ್ದುಪಡಿಸಲು ನಿರ್ದೇಶನ ನೀಡಿದರು.
ಅಂಗನವಾಡಿ ಕಳಪೆ ಆಹಾರ ನಿಯಂತ್ರಣ ಹಾಗೂ ಇತರೆ ಇಲಾಖೆಗಳ ಪ್ರಗತಿ ಪರಿಶೀಲನೆ :
ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು. ಬಾಣಂತಿಯರ ಆರೋಗ್ಯದ ಮೇಲೆ ನಿಗಾ ವಹಿಸಿ ತಾಯಿ-ಶಿಶು ಮರಣ ಪ್ರಮಾಣ ತಡೆಯಬೇಕು. ಕಳಪೆ ಆಹಾರ ಪೂರೈಸುವ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಚ್ಚರಿಸಿದ ಶಾಸಕರು, ಪೋಕ್ಸೋ ಪ್ರಕರಣಗಳ ತಡೆಗೆ ಜಾಗೃತಿ ಹೆಚ್ಚಿಸಲು ಸೂಚಿಸಿದರು. ಇದೇ ಸಂದರ್ಭದಲ್ಲಿ ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ, ನಿರ್ಮಿತಿ ಕೇಂದ್ರ, ಸಮಾಜ ಕಲ್ಯಾಣ, ಸಾರ್ವಜನಿಕ ಶಿಕ್ಷಣ, ಆಹಾರ ಇಲಾಖೆ, ಅಕ್ಷರ ದಾಸೋಹ, ಪಿಆರ್ಇಡಿ (PRED) ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು.
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯ ಕೊರತೆ ಎದುರಾಗಿರುವುದರಿಂದ ರೈತ ಸಂಘದವರು ಮೋಡ ಬಿತ್ತನೆಗೆ ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಕೃಷಿ ಇಲಾಖೆ ಅಧಿಕಾರಿಗಳು ಇದಕ್ಕೆ ಸಂಬಂಧಿಸಿದಂತೆ ವರದಿ ತಯಾರಿಸಿ ಕೊಡಿ. ಬಳಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೋಡ ಬಿತ್ತನೆಗೆ ತಯಾರಿ ನಡೆಸಿಕೊಳ್ಳೋಣ ಎಂದು ತಿಳಿಸಿದ್ದಾರೆ.
ಈ ಸಭೆಯಲ್ಲಿ ತಾಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಮಂಜುನಾಥ್ ಸ್ವಾಮಿ, ಜಿಲ್ಲಾ ಗ್ಯಾರೆಂಟಿ ಸಮಿತಿ ಅಧ್ಯಕ್ಷ ಶಿವಣ್ಣ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರವಿಕುಮಾರ್, ತಹಶೀಲ್ದಾರ್ ಗೋವಿಂದ್ ರಾಜ್, ಕೆಡಿಪಿ ಸದಸ್ಯರಾದ ನಾಗರಾಜ್, ಸಂತೋಷ್, ವಿಜಯ್ ಕುಮಾರ್ ಉಪಸ್ಥಿತರಿದ್ದರು.












