ಚಿತ್ರದುರ್ಗ. ಅ.29: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಮನೆಗಳ ಮುಂದೆ ರಂಗೋಲಿ ಹಾಕಿ, ಗಾಳಿಪಟಗಳನ್ನು ಹಾರಿಸಿ, ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸುವುದರೊಂದಿಗೆ ರಾಜ್ಯೋತ್ಸವ ಸಂಭ್ರಮ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮನವಿ ಮಾಡಿದ್ದಾರೆ.
ನವೆಂಬರ್ 1 ರಂದು ಜಿಲ್ಲೆಯ ಎಲ್ಲರೂ ತಮ್ಮ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷವಾಕ್ಯ ಬರೆಯುವಂತೆ ಅವರು ವಿನಂತಿಸಿದ್ದಾರೆ.
ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ರಾಜ್ಯದ ಎಲ್ಲ ಆಕಾಶವಾಣಿ ಕೇಂದ್ರಗಳಿಂದ (ರೇಡಿಯೋ) ನಾಡಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಜಿಲ್ಲೆಯ ಎಲ್ಲಾ ನಾಗರಿಕರು ನಾಡಗೀತೆ ಪ್ರಸಾರವಾಗುವ ಸಂದರ್ಭದಲ್ಲಿ ಎದ್ದು ನಿಂತು ಗೌರವ ಸಲ್ಲಿಸಬೇಕು.
ನವೆಂಬರ್ 1ರ ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಬೇಕು. ಅದೇ ರೀತಿ ನವೆಂಬರ್ 1ರ ಸಂಜೆ 7 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮನೆಗಳ ಮುಂದೆ, ಕಚೇರಿಗಳು ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಬೇಕು.
ಜಿಲ್ಲೆಯ ಎಲ್ಲ ನಾಗರಿಕರು, ಸಂಘ-ಸಂಸ್ಥೆಗಳು ರಂಗೋಲಿ, ಗಾಳಿಪಟ ಉತ್ಸವ ಹಾಗೂ ಕನ್ನಡಜ್ಯೋತಿ ಬೆಳಗುವ ಮೂಲಕ ರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಜಿಲ್ಲೆಯ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.