ಸುದ್ದಿಒನ್, ಚಿತ್ರದುರ್ಗ. ಸೆ.23: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಶನಿವಾರ ಚಿತ್ರದುರ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿದ್ದ 4,103 ಬಾಕಿ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 1,10,549 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಯಶಸ್ವಿಯಾಗಿ ಇತ್ಯರ್ಥಪಡಿಸಲಾಗಿದೆ.
ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಒಟ್ಟು 54,379 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದವು (25,054 ಸಿವಿಲ್ ಹಾಗೂ 29,145 ಕ್ರಿಮಿನಲ್). ಇವುಗಳಲ್ಲಿ 9,091 ಪ್ರಕರಣಗಳು ಕಾನೂನಿನ ಪ್ರಕಾರ ರಾಜಿಯಾಗಬಹುದಾದ ವ್ಯಾಜ್ಯಗಳಾಗಿದ್ದು, 7,511 ಪ್ರಕರಣಗಳನ್ನು ಸಂಧಾನಕ್ಕಾಗಿ ಕೈಗೆತ್ತಿಕೊಳ್ಳಲಾಗಿತ್ತು. ಅವುಗಳಲ್ಲಿ 4,103 ನ್ಯಾಯಾಲಯದ ಬಾಕಿ ಪ್ರಕರಣಗಳನ್ನು ಯಶಸ್ವಿಯಾಗಿ ಬಗೆಹರಿಸಲಾಗಿದೆ. ಅಲ್ಲದೆ, ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಚಿತ್ರದುರ್ಗ ನಗರ ಹಾಗೂ ತಾಲ್ಲೂಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು 05 ದಂಪತಿ ತಮ್ಮ ಮದ್ಯದ ವ್ಯಾಜ್ಯಗಳನ್ನು ಬಗೆಹರಿಸಿಕೊಂಡು ಒಂದಾಗಿದ್ದಾರೆ.
ಈ ಯಶಸ್ಸಿಗೆ ಸಹಕರಿಸಿದ ಪ್ರಾದೇಶಿಕ ಸಾರಿಗೆ ಇಲಾಖೆ, ಕೆ.ಎಸ್.ಆರ್.ಟಿ.ಸಿ., ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ), ನಗರಸಭೆ, ಅಬಕಾರಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ.ಡಿ. ಮಹಾವರ್ಕರ್ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಶಮೀರ್ ಪಿ. ನಂದ್ಯಾಲ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.









