ಸುದ್ದಿಒನ್, ಚಿತ್ರದುರ್ಗ, (ನ.19) : ಜಿಲ್ಲೆಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಮಳೆ ಮುಂದುವರೆಯುವ ಮುನ್ನೂಚನೆ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು ಮತ್ತು ಶಿಕ್ಷಕರ ಹಿತದೃಷ್ಟಿಯಿಂದ ನ.19 ಮತ್ತು ನ. 20 ಎರಡು ದಿನಗಳ ಕಾಲ ಒಂದರಿಂದ ಹತ್ತನೆ ತರಗತಿಯ ವರೆಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಡಿಡಿಪಿಐ ರವಿಶಂಕರ್ ರೆಡ್ಡಿ ರಜೆ ಘೋಷಿಸಿ ಅದೇಶ ನೀಡಿದ್ದಾರೆ.
ಜಿಲ್ಲೆ ವ್ಯಾಪ್ತಿಗೆ ಬರುವ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಈ ರಜೆ ಅನ್ವಯ ವಾಗಲಿದೆ. ಈ ಎರಡು ದಿನಗಳ ರಜೆ ಅವಧಿಯನ್ನು ಮುಂದಿನ ದಿನಗಳಲ್ಲಿ ತರಗತಿಗಳನ್ನು ನಡೆಸಿ ಸರಿದೂಗಿಸಿಕೊಳ್ಳಲು ಡಿಡಿಪಿಐ ತಿಳಿಸಿದ್ದಾರೆ.
ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಗಳಲ್ಲಿ ವಾಯುಭಾರ ಕುಸಿತ ಕಾಣಿಸಿಕೊಂಡಿರುವುದರಿಂದ ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನೂ ಹಲವು ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.