ಬಾಲ್ಯವಿವಾಹ ಪ್ರಕರಣಗಳಲ್ಲಿ ಚಿತ್ರದುರ್ಗ ಜಿಲ್ಲೆಯೇ ನಂ.1 : ಹೆಚ್ಚಿನ  ಜಾಗೃತಿ ಶಿಬಿರ ಆಯೋಜಿಸಿ : ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಸೂಚನೆ

2 Min Read

ಚಿತ್ರದುರ್ಗ. ಸೆ.02:  ಬಾಲ್ಯವಿವಾಹ ಪಿಡುಗು ಬಹಳ ಗಂಭೀರವಾದ ವಿಷಯವಾಗಿದ್ದು, ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿಯೇ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಿದ್ದು, ನಂ.1 ಸ್ಥಾನ ಪಡೆದಿದೆ. ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಜಾಗೃತಿ ಶಿಬಿರಗಳನ್ನು ಹೆಚ್ಚಾಗಿ ಆಯೋಜಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಲ್ಯ ವಿವಾಹ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾದ ಹಿನ್ನಲೆಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲು ಜಿಲ್ಲೆಗೆ ಆಗಮಿಸಿದ್ದೇನೆ. ಜಿಲ್ಲೆಯಲ್ಲಿ ಹೆಚ್ಚಿದ ಬಾಲ್ಯ ವಿವಾಹ ತಡೆಗೆ ಕೈಗೊಂಡ ಕ್ರಮಗಳೇನು? ಯಾವ ಕ್ರಮಗಳು ಕೈಗೊಂಡರೆ ಬಾಲ್ಯವಿವಾಹ ತಡೆಯಲು ಸಾಧ್ಯವಿದೆ? ಅಧಿಕಾರಿಗಳ ಕಾರ್ಯವೈಖರಿ ಏನು? ತಪ್ಪಿತಸ್ಥ ಎಷ್ಟು ಜನರಿಗೆ ಶಿಕ್ಷೆಯಾಗಿದೆ ಎಂದು ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅಧಿಕಾರಿಗಳನ್ನು ಪ್ರಶ್ನಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ಈಗಾಗಲೇ ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಶಿಬಿರ ನಡೆಸಿ ಅರಿವು ಮೂಡಿಸಲಾಗುತ್ತಿದೆ. ಬಾಲ್ಯವಿವಾಹ ನಿಷೇಧ ಅಧಿಕಾರಿಗಳಿಗೂ ಈ ಕುರಿತು ತರಬೇತಿ ನೀಡಲಾಗಿದೆ ಎಂದು ಹೇಳಿದರು.

ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 87 ದೂರುಗಳು ಬಂದಿದ್ದು, 42 ಪ್ರಕರಣಗಳನ್ನು ತಡೆಯಲಾಗಿದ್ದು, 41 ಬಾಲ್ಯ ವಿವಾಹ ಪ್ರಕರಣಗಳು ನಡೆದಿವೆ, ಈ  ಪ್ರಕರಣಗಳಿಗೆ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ತಾಯಂದಿರ ಮರಣ ಪ್ರಮಾಣ ಒಂದು ಲಕ್ಷ ಜೀವಂತ ಜನನಕ್ಕೆ 83.29 ಇರುವುದು ಕಳವಳಕಾರಿಯಾಗಿದೆ. ತಾಯಂದಿರ ಮರಣ ರಾಜ್ಯ ಪ್ರಮಾಣ ಸರಾಸರಿ 69 ರಷ್ಟಿದೆ. ಸಾಂಸ್ಥಿಕ ಹೆರಿಗೆಯ ನಂತರೂ ಬಾಣಂತಿಯರು ಸಾವನ್ನಪ್ಪುತ್ತಿರುವುದು ಏಕೆ? ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು ಹೆರಿಗೆ ನಂತರ ಬಾಣಂತಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲವೇ? ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್ ಅವರನ್ನು ಪ್ರಶ್ನಿಸಿದರು.

ಜಿಲ್ಲೆಯಲ್ಲಿ ಜುಲೈವರೆಗೆ 5 ಬಾಣಂತಿಯರು ಸಾವನ್ನಪ್ಪಿದ್ದಾರೆ. ಇವರೆಲ್ಲರೂ 21 ರಿಂದ 24 ವಯೋಮಾನದವರಾಗಿದ್ದು, ಆಸ್ಪತ್ರೆಯಲ್ಲಿ ಹೆರಿಗೆ ಆದ ಮೇಲೆ ಮನೆಗೆ ತೆರಳಿದ ನಂತರ ಸಾವನ್ನಪ್ಪಿದ್ದಾರೆ ಎಂದು ಡಾ.ಅಭಿನವ್ ತಿಳಿಸಿದರು.
ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ಒಂದು ಸಾವಿರ ಜೀವಂತ ಜನನಕ್ಕೆ 13 ಇದೆ. ರಾಜ್ಯದ ಶಿಶು ಪ್ರಮಾಣ ಸರಾಸರಿ 19 ರಷ್ಟಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯ ಶಿಶು ಪ್ರಮಾಣ ಕಡಿಮೆಯಾಗಿದೆ ಎಂದು ಜಿಲ್ಲಾಧಿಕಾರಿ.ಟಿ.ವೆಂಕಟೇಶ್ ಸಚಿವರ ಗಮನಕ್ಕೆ ತಂದರು.

Share This Article
Leave a Comment

Leave a Reply

Your email address will not be published. Required fields are marked *