ಅಪಘಾತಗಳ ಸಂಖ್ಯೆಯಲ್ಲಿ ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆ ನಾಲ್ಕನೆ ಸ್ಥಾನ : ಅಧಿಕಾರಿಗಳ ನಡೆಗೆ ಡಿಸಿ, ಎಸ್‍ಪಿ ತೀವ್ರ ಬೇಸರ

3 Min Read

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 02 : ಜಿಲ್ಲೆಯಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಪ್ರಮುಖ ರಾಜ್ಯ ಹೆದ್ದಾರಿಗಳು ಹಾದುಹೋಗಿದ್ದು, ಪದೇ ಪದೇ ಅಪಘಾತ ಸಂಭವಿಸುತ್ತಿವೆ. ಸ್ಥಳಗಳನ್ನು ಬ್ಲಾಕ್ ಸ್ಪಾಟ್ ಎಂದು ಗುರುತಿಸಿ, ವೈಜ್ಞಾನಿಕವಾಗಿ ಸಮಸ್ಯೆ ನಿವಾರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗಳಿಗೆ ಈ ಹಿಂದಿನ ಹಲವು ಸಭೆಗಳಲ್ಲಿ ಸೂಚನೆ ನೀಡಿದ್ದರೂ, ಅಧಿಕಾರಿಗಳು ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಡಿಸಿ, ಎಸ್‍ಪಿ ತೀವ್ರ ಬೇಸರ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ವೇಳೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಡಿಸಿ ಹಾಗೂ ಎಸ್‍ಪಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಅಪಘಾತಗಳ ಸಂಖ್ಯೆಯಲ್ಲಿ ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆ ನಾಲ್ಕನೆ ಸ್ಥಾನದಲ್ಲಿದೆ.  ಈ ಕುರಿತಂತೆ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿ, ಅಪಘಾತಗಳ ಸಂಖ್ಯೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.  ಈ ಕುರಿತಂತೆ ಹಲವು ಬಾರಿ ಸಭೆಗಳಲ್ಲಿ ಸಲಹೆ, ಸೂಚನೆಗಳನ್ನು ನೀಡಿದರೂ ಪಾಲನೆ ಮಾಡುತ್ತಿಲ್ಲ.  ಮತ್ತೆ ಸಭೆ ಸೇರಿದಾಗಲೇ ಈ ಬಗ್ಗೆ ಮಾತನಾಡುತ್ತೀರಿ. ಸಭೆಯಲ್ಲಿ ನಾವೇನು ಭಜನೆ ಮಾಡಲು ಸೇರುತ್ತೇವೆಯೇ ಎಂದು ಅಧಿಕಾರಿಗಳ ನಡೆಗೆ ತೀವ್ರ ಬೇಸರ ಹೊರಹಾಕಿದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು, ಅಪಘಾತಗಳು ಸಂಭವಿಸಿದ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುವಂತಹ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಬೆಸ್ಕಾಂ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಸೇರಿದಂತೆ ಆಯಾ ಅಧಿಕಾರಿಗಳನ್ನು ಕೂಡ ಪ್ರತಿವಾದಿಗಳನ್ನಾಗಿ ಮಾಡಿ ಎಫ್‍ಐಆರ್ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಜಿಲ್ಲೆಯಲ್ಲಿ ಸುಮಾರು 25 ಸಾವಿರಕೂ ಹೆಚ್ಚು ಟ್ರ್ಯಾಕ್ಟರ್ ಟ್ರ್ಯಾಲಿಗಳಿವೆ, ಎಷ್ಟು ಟ್ರ್ಯಾಕ್ಟರ್‍ಗಳಿಗೆ ರಿಫ್ಲೆಕ್ಟರ್ ಸ್ಟಿಕರ್ ಅಳವಡಿಸಿದ್ದೀರಿ, ಎಂಬುದಾಗಿ ಎಸ್‍ಪಿ ರಂಜಿತ್ ಕುಮಾರ್ ಬಂಡಾರು ಅವರು ಮೋಟಾರು ವಾಹನ ನಿರೀಕ್ಷಕರಿಗೆ ಪ್ರಶ್ನಿಸಿದರು.  ಇದಕ್ಕೆ ಉತ್ತಿರಿಸಿದ ಅವರು, ಆರ್‍ಟಿಒ ಕಚೇರಿಗೆ ವಿವಿಧ ಕಾರ್ಯಗಳಿಗೆ ಬಂದಂತಹ 450 ಟ್ರ್ಯಾಕ್ಟರ್‍ಗಳಿಗೆ ಅಳವಡಿಸಿದ್ದೇವೆ ಎಂದರು.  ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಎಸ್‍ಪಿ ಅವರು,  ಕತ್ತಲಲ್ಲಿ ಟ್ರ್ಯಾಕ್ಟರ್ ಟ್ರ್ಯಾಲಿಗಳು ರಸ್ತೆಗಳಲ್ಲಿ ಹೋಗುತ್ತಿದ್ದರೂ ವಾಹನ ಸವಾರರಿಗೆ ಗೋಚರಿಸುವುದಿಲ್ಲ, ಇತ್ತೀಚೆಗಷ್ಟೇ ಕಾರು ಟ್ರ್ಯಾಕ್ಟರ್ ಅಪಘಾತವಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜರುಗಿದೆ.  ವಿಶೇಷ ಅಭಿಯಾನ ಮಾಡಿ, ಟ್ರ್ಯಾಕ್ಟರ್ ಟ್ರ್ಯಾಲಿಗಳಿಗೆ ರಿಫ್ಲೆಕ್ಟರ್ ಸ್ಟಿಕರ್ ಅಳವಡಿಸುವಂತೆ ಸೂಚನೆ ನೀಡಲಾಗಿತ್ತು, ಆದರೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕ್ರಮ ವಹಿಸಿಲ್ಲ ಎಂದು ಎಸ್‍ಪಿ ರಂಜಿತ್ ಕುಮಾರ್ ಬಂಡಾರು ಅಸಮಾಧಾನ ವ್ಯಕ್ತಪಡಿಸಿದರು.

ಅಪಘಾತ ವಲಯ ಜಂಟಿ ಸಮೀಕ್ಷೆಗೆ ಸೂಚನೆ:
ಜಿಲ್ಲೆಯಲ್ಲಿರುವ ಅಪಘಾತ ವಲಯಗಳ ಜಂಟಿ ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಅಫಘಾತಗಳನ್ನು ಇಳಿಮುಖಗೊಳಿಸಲು ಹಾಗೂ ಅಪಘಾತ ವಲಯಗಳಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಸೇರಿದಂತೆ ವಿವಿಧ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪಘಾತಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಹಂಪ್ಸ್, ಸೂಚನಾ ಫಲಕ, ಸಿಗ್ನಲ್ ಅಳವಡಿಕೆ ಸೇರಿದಂತೆ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು  ಕೈಗೊಂಡರೆ ಜನರ ಜೀವಗಳನ್ನು ಉಳಿಸಬಹುದಾಗಿದೆ ಹಾಗೂ ಅಪಘಾತಗಳ ಸಂಖ್ಯೆಯನ್ನು ಇಳಿಮುಖಗೊಳಿಸಲು ಸಹಕಾರಿಯಾಗಲಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ನಾಗರಾಜ್, ಡಿವೈಎಸ್‍ಪಿ ಗಳಾದ ದಿನಕರ್, ಶಿವಕುಮಾರ್, ಸತ್ಯನಾರಾಯಣ ರಾವ್  ನಗರಸಭೆ ಪೌರಾಯುಕ್ತೆ ಲಕ್ಷ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article