ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 22 : ವಿದ್ಯಾರ್ಥಿನಿ ವರ್ಷಿತಾಳ ಮೇಲೆ ಅತ್ಯಾಚಾರವೆಸಗಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರು, ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿ ಕೋವೇರಹಟ್ಟಿಯ ಹತ್ತೊಂಬತ್ತು ವರ್ಷದ ವಿದ್ಯಾರ್ಥಿನಿ ವರ್ಷಿತಾಳನ್ನು ಬರ್ಬರವಾಗಿ ಹತ್ಯೆಗೈದಿರುವುದು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿದೆ. ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ವರ್ಷಿತಾ ಕುಟುಂಬಕ್ಕೆ ಪರಿಹಾರ ನೀಡಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಕೊಡಬೇಕೆಂದು ಒತ್ತಾಯಿಸಲಾಯಿತು.
ಕರ್ನಾಟಕ ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷೆ ಹೆಚ್.ಭಾರತಿ, ಕೆ.ಬಿ.ಮಲ್ಲಮ್ಮ, ಉಷಾರಾಣಿ, ಲಕ್ಷ್ಮಮ್ಮ, ಸೋಮಣ್ಣ, ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ಶಂಕ್ರಮ್ಮ, ನೇತ್ರ, ವೆಂಕಟೇಶ್ ಸಾಣಿಕೆರೆ, ಭ್ರಷ್ಟಾಚಾರ ವಿರೋಧಿ ಆಂದೋಲನ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ, ಅನಂತಮೂರ್ತಿನಾಯ್ಕ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.


