ಚಿತ್ರದುರ್ಗ ನ. 24 : ಚಿತ್ರದುರ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ನ. 27 ರಿಂದ 29 ರವರೆಗೆ ಮೂರು ದಿನಗಳ ಕಾಲ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.
ಕ್ರೀಡಾಕೂಟದ ಉದ್ಘಾಟನೆ 27 ರಂದು ಬೆಳಿಗ್ಗೆ 09 ಗಂಟೆಗೆ ನಡೆಯಲಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ್ ವಾಸುದೇವ್ ಉದ್ಘಾಟನೆ ನೆರವೇರಿಸುವರು. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಎಸ್. ಆಕಾಶ್ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಿಗೆ ಗೌರವ ರಕ್ಷೆ, ಪಥ ಸಂಚಲನ, ಕ್ರೀಡಾ ಜ್ಯೋತಿಯ ಸ್ವಾಗತ, ಪ್ರತಿಜ್ಞಾ ವಿಧಿ ಸ್ವೀಕಾರ ನೆರವೇರುವುದರೊಂದಿಗೆ ವಿವಿಧ ಕ್ರೀಡೆಗಳು ನಡೆಯಲಿವೆ.
ಕ್ರೀಡಾಕೂಟದ ಸಮಾರೋಪ ಸಮಾರಂಭ ನ. 29 ರಂದು ಸಂಜೆ 04 ಗಂಟೆಗೆ ಜರುಗಲಿದ್ದು, ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್. ರವಿಕಾಂತೇಗೌಡ ಹಾಗೂ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಅವರು ತಿಳಿಸಿದ್ದಾರೆ.
