ಚಿತ್ರದುರ್ಗ. ನ.17: ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವ ಎಲ್ಲಾ ಅನುಷ್ಠಾನ ಇಲಾಖೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಕಡ್ಡಾಯವಾಗಿ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಬೇಕು. ತನ್ಮೂಲಕ ಸರ್ಕಾರದ ಸೌಲಭ್ಯಗಳು ಅವರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಸುಂಕ ಸಂಗ್ರಹಣೆ ಹಾಗೂ ವರ್ಗಾವಣೆ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಕುರಿತು ಆಯೋಜಿಸಿದ್ದ ಜಿಲ್ಲಾಮಟ್ಟದ ಸುಂಕ ಮೇಲ್ವಿಚಾರಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ನಿಯಮಗಳಲ್ಲೇ ಕಾರ್ಮಿಕ ಕಾಯ್ದೆಗಳ ಪಾಲನೆ ಹಾಗೂ ನೋಂದಣಿ ಕಡ್ಡಾಯವಾಗಿರುತ್ತದೆ. ಎಂಜಿನಿಯರಿಂಗ್ ಇಲಾಖೆಗಳು, ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳು ತಾವು ಕೈಗೊಳ್ಳುವ ಕಾಮಗಾರಿಗಳಲ್ಲಿ ಶೇ.100ರಷ್ಟು ಕಾರ್ಮಿಕರ ನೋಂದಣಿ ಮಾಡಿಸಬೇಕು. ಒಂದು ವೇಳೆ ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸಿದರೆ ಅದು ಟೆಂಡರ್ ನಿಯಮಗಳ ಉಲ್ಲಂಘನೆಯಾಗಲಿದ್ದು, ಇಲಾಖೆಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಫಾಲೋಅಪ್ ಮಾಡಬೇಕು ಎಂದು ತಾಕೀತು ಮಾಡಿದರು.
ವಿವಿಧ ಇಲಾಖೆಗಳು ಕಟ್ಟಡ ನಿರ್ಮಾಣ ಅನುಮತಿ ಹಾಗೂ ಸುಂಕ ಸಂಗ್ರಹದ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು. ಈಗಾಗಲೇ ಚೆಕ್ ಮತ್ತು ಡಿಡಿ ಪಾವತಿಯಲ್ಲಿನ ನ್ಯೂನತೆಗಳನ್ನು ಸರಿಪಡಿಸುವಂತೆ ಪತ್ರ ಬರೆಯಲಾಗಿದೆ ಎಂದು ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಸಭೆಗೆ ಮಾಹಿತಿ ನೀಡಿದರು.
ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಪಟ್ಟಿಯನ್ನು ಇಲಾಖೆಗಳು ನೀಡಿದರೆ, ನಮ್ಮ ಇಲಾಖೆಯಿಂದಲೇ ಸ್ಥಳಕ್ಕೆ ತೆರಳಿ ಉಚಿತವಾಗಿ ಕಾರ್ಮಿಕರ ಗುರುತಿನ ಚೀಟಿ ಮಾಡಿಕೊಡಲಾಗುವುದು. ಕಾರ್ಡ್ ಹೊಂದಿದ್ದರೆ ಮಾತ್ರ ಅಪಘಾತ ಪರಿಹಾರ, ಮಕ್ಕಳ ಶೈಕ್ಷಣಿಕ ಧನಸಹಾಯ, ಮದುವೆ ಸಹಾಯಧನ ಸೇರಿದಂತೆ ಮಂಡಳಿಯ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಸಾಧ್ಯ. ಕಾರ್ಡ್ ಇಲ್ಲದಿದ್ದರೆ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಆದ್ದರಿಂದ ಎಲ್ಲಾ ಅನುಷ್ಠಾನ ಇಲಾಖೆಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಕಾರ್ಮಿಕ ನಿರೀಕ್ಷಕರಾದ ಅಲ್ಲಾಭಕ್ಷಿ, ರಾಜಣ್ಣ, ಕುಸುಮಾ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯನಿರ್ವಾಹಕ ಎಸ್.ವಿ.ಪ್ರಸಾದ್, ಕ್ಷೇತ್ರ ನಿರೀಕ್ಷಕ ಮಾಳಪ್ಪ, ವಿಷಯ ನಿರ್ವಾಹಕಿ ಲತಾ, ಕರ್ನಾಟಕ ರಾಜ್ಯ ಅಸಂಘಟಿತ ಸಾಮಾಜಿಕ ಭದ್ರತಾ ಮಂಡಳಿ ವಿಷಯ ನಿರ್ವಾಹಕ ರಾಜೀವ್ ಹಿರೇಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.












