ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ಪದೇ ಪದೇ ಭೂಕಂಪನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂಬಂಧ ವರದಿ ನೀಡುವಂತೆ ಆದೇಶ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತಾಗಿ ಪ್ರಕೃತಿ ವಿಕೋಪ ನಿರ್ವಹಣೆ ಕೋಶದ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ ನಡೆಸಿದರು.
ಕಲಬುರಗಿಯ ಚಿಂಚೋಳಿ, ಸೇಡಂನಲ್ಲಿ ತುರ್ತಾಗಿ ಪರಿಹಾರ ಕೇಂದ್ರಗಳನ್ನು ತೆರೆಯಲು ಸೂಚನೆ ನೀಡಿದರು. ಭೂಕಂಪದಿಂದ ಹಾನಿಗೀಡಾದ ಮನೆಗಳಿಗೆ ಪರಿಹಾರ ಒದಗಿಸಲು ಆದೇಶಿಸಿದ ಸಿಎಂ ಭೂಕಂಪನ ಪ್ರಕರಣಕ್ಕೆ ಸಂಬಂಧಪಟ್ಟಂತೆ ವರದಿ ನೀಡುವಂತೆ ನಿರ್ದೇಶನ ನೀಡಿದರು.
ಇದೇ ವೇಳೆ ಸಿಎಂ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣೆ ಘಟಕ ಎಸ್ಡಿಆರ್ಎಫ್ ಸಭೆ ನಡೆಸಿದರು. ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಹಾನಿ, ಬೆಳೆ ಹಾನಿ ಮತ್ತು ಇತರೆ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಸಚಿವರಾದ ಕೆಎಸ್ ಈಶ್ವರಪ್ಪ, ವಿ. ಸೋಮಣ್ಣ, ಕೆ. ಗೋಪಾಲಯ್ಯ, ಬೈರತಿ ಬಸವರಾಜ್, ಮುನಿರತ್ನ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎನ್ಎಸ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸಭೆಯಲ್ಲಿ ಪಾಲ್ಗೊಂಡಿದ್ದರು.