ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ನಡೆದ ಮೇಲೆ ಸರ್ಕಾರ ಪಟಾಕಿ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಈ ಸಂಬಂಧ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜಂಟಿ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಮಹತ್ವದ ಸೂಚನೆಯನ್ನು ಅಧಿಕಾರಿಗಳಿಗೆ ಸಿದ್ದರಾಮಯ್ಯ ನೀಡಿದ್ದಾರೆ.
ರಾಜ್ಯದಾದ್ಯಂತ ಪ್ರತಿಯೊಂದು ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್‌ಗಳನ್ನು ಅಮಾನತು ಮಾಡಬೇಕು.
ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು.
ಎಕ್ಸ್‌ಪ್ಲೋಸಿವ್ ಆಕ್ಟ್ ನಲ್ಲಿ ಲೈಸೆನ್ಸ್ ಕೊಡುವಾಗ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವ ಕಳೆದುಕೊಂಡಿದ್ದಕ್ಕೆ ಯಾರು ಹೊಣೆಗಾರರು? ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು.
ಎಲ್ಲ ಪಟಾಕಿ ಮಳಿಗೆಗಳ ಸುರಕ್ಷತೆಯನ್ನೂ ತಪಾಸಣೆ ಮಾಡಬೇಕು. ಇನ್ನು ಮುಂದೆ ಲೈಸನ್ಸ್ ನೀಡುವಾಗ ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು. ತಪಾಸಣಾ ವರದಿ ಸರಿಯಾಗಿದೆಯೇ ಎಂದು ಪರಿಶೀಲಿಸಿಯೇ ಲೈಸನ್ಸ್ ನೀಡುವ ಬಗ್ಗೆ ತೀರ್ಮಾನಿಸಬೇಕು. ಈ ಪ್ರಕರಣದಲ್ಲಿ ಗೋಡೌನ್‌ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು. ರಾಜ್ಯದೆಲ್ಲೆಡೆ ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್‌ಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವುಗಳ ಪರವಾನಗಿ ರದ್ದುಪಡಿಸಬೇಕು.
ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತಿದೆ. ಬಿಬಿಎಂಪಿ, ವಿದ್ಯುತ್, ಅಗ್ನಿಶಾಮಕ, ಟ್ರಾಫಿಕ್ ಮತ್ತು ಕಾನೂನು-ಸುವ್ಯವಸ್ಥೇ ವಿಭಾಗದ ನಿರಾಕ್ಷೇಪಣಾ ಪತ್ರ ಪಡೆದು ಲೈಸನ್ಸ್ ನೀಡಲಾಗುತ್ತದೆ. ಇದು ಐದು ವರ್ಷಕ್ಕೊಮ್ಮೆ ನೀಡಲಾಗುತ್ತಿದೆ. ನವೀಕರಣಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಫೋಟಕಗಳ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಾವಳಿಗಳ ತಿದ್ದುಪಡಿ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ರಾಜ್ಯಕ್ಕೆ ಅನ್ವಯಿಸುವಂತೆ ನಿಯಮ ಬದಲಾವಣೆ ಆಗಬೇಕು. ನಿಗದಿ ಮಾನದಂಡ ಪೂರೈಸದಿದ್ದರೂ, ತಪಾಸಣಾ ವರದಿ ನೀಡಿ ಶಿಫಾರಸು ಮಾಡಿದ ಸರ್ಕಲ್ ಇನ್ಸ್‌ಪೆಕ್ಟರ್, ತಹಸೀಲ್ದಾರ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಬೇಕು.
ಅತ್ತಿಬೆಲೆ- ಹೊಸೂರು ಗಡಿ ಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಬೇಕು. ಈ ಕುರಿತು ನ್ಯಾಯಾಲಯಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಹಸಿರು ಪಟಾಕಿಗಳ ಮಾರಾಟವನ್ನೂ ಖಾತರಿಪಡಿಸಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.