Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅ.02ರಂದು ಭೂ ಮಾಪಕರ ಹುದ್ದೆಗಳ ನೇಮಕಾತಿ ಮತ್ತು ಅ.04ರಂದು ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ

---Advertisement---

ಚಿತ್ರದುರ್ಗ. ಸೆ.30: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅಕ್ಟೋಬರ್ 02ರಂದು ನಡೆಯುವ ಭೂಮಾಪಕರ ಹುದ್ದೆಗಳ ನೇಮಕಾತಿ ಹಾಗೂ ಅಕ್ಟೋಬರ್ 04ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕ ಹಾಗೂ ಸೂಕ್ಷ್ಮವಾಗಿ ನಡೆಸಬೇಕಾಗಿದ್ದು, ಪರೀಕ್ಷಾ ಕರ್ತವ್ಯದಲ್ಲಿ ತೊಡಗುವ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್. ರಮ್ಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಭೂಮಾಪಕ ಹುದ್ದೆಗಳು ಹಾಗೂ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಕ್ಟೋಬರ್ 02ರಂದು ನಡೆಯುವ ಭೂಮಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯು ಚಿತ್ರದುರ್ಗ ನಗರದ 9  ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 3853 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು. ಹಾಗೂ ಅಕ್ಟೋಬರ್ 04ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಪರೀಕ್ಷೆಯು ಚಿತ್ರದುರ್ಗ ನಗರದ 24 ಪರೀಕ್ಷಾ ಕೇಂದ್ರಗಳು, ಚಳ್ಳಕೆರೆ ತಾಲ್ಲೂಕಿನಲ್ಲಿ 5 ಕೇಂದ್ರಗಳು, ಹಿರಿಯೂರು ತಾಲ್ಲೂಕಿನಲ್ಲಿ 5 ಕೇಂದ್ರಗಳು ಸೇರಿದಂತೆ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 13441 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು. ಈ ಎರಡು ಪರೀಕ್ಷೆಯು ಎರಡು ಅವಧಿಯಲ್ಲಿ ಅಂದರೆ ಪತ್ರಿಕೆ-1 ಬೆಳಿಗ್ಗೆ 10.30  ರಿಂದ ಮಧ್ಯಾಹ್ನ 12.30 ರವರೆಗೆ ಹಾಗೂ ಪತ್ರಿಕೆ-2 ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ನಡೆಯಲಿದೆ ಎಂದು ತಿಳಿಸಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕೊಠಡಿಗಳಲ್ಲಿ ಗೋಡೆ ಗಡಿಯಾರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಬೇಕು. ಗಡಿಯಾರವಿಲ್ಲದ ಕೊಠಡಿಗಳಲ್ಲಿ ಮೇಲ್ವಿಚಾರಕರೇ ಅಭ್ಯರ್ಥಿಗಳಿಗೆ ಕಾಲಕಾಲಕ್ಕೆ ಸಮಯದ ಬಗ್ಗೆ ಮಾಹಿತಿ ನೀಡಬೇಕು ಎಂದರು.
ಪರೀಕ್ಷಾ ಕೊಠಡಿಯೊಳಗೆ ಪರೀಕ್ಷಾರ್ಥಿಗಳಿಗೆ ಮಾತ್ರವಲ್ಲದೆ ಕೊಠಡಿ ಮೇಲ್ವಿಚಾರಕರಿಗೂ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರತಿಯೊಂದು ಕೊಠಡಿಯಲ್ಲೂ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇರಲಿದ್ದು, ಯಾವುದೇ ಸಿಬ್ಬಂದಿ ಮೊಬೈಲ್ ಬಳಸುವುದು ಅಥವಾ ಜವಾಬ್ದಾರಿರಹಿತವಾಗಿ ನಡೆದುಕೊಳ್ಳುವುದು ಕಂಡುಬಂದಲ್ಲಿ ಕ್ಯಾಮೆರಾ ದಾಖಲೆಗಳ ಆಧಾರದ ಮೇಲೆಯೇ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಪರೀಕ್ಷಾ ಮುಖ್ಯ ಅಧೀಕ್ಷಕರು ಹಾಗೂ ಮಾರ್ಗಾಧಿಕಾರಿಗಳು ಪರೀಕ್ಷಾ ಸಿಬ್ಬಂದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಸೂಚನೆಗಳನ್ನು ಸ್ಪಷ್ಟವಾಗಿ ವಿವರಿಸಬೇಕು. ಅಭ್ಯರ್ಥಿಗಳಿಗೆ ನಿಗದಿಪಡಿಸಿದ ವಸ್ತ್ರ ಸಂಹಿತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೊಠಡಿಗಳಲ್ಲಿ ಮೇಲ್ವಿಚಾರಕರು ಅವಸರದಲ್ಲಿ ಒಎಂಆರ್ ಶೀಟ್‍ಗಳನ್ನು ವಿತರಿಸಬಾರದು. ಅಭ್ಯರ್ಥಿಯ ಹೆಸರು, ಹಾಲ್ ಟಿಕೆಟ್‍ನಲ್ಲಿರುವ ರೋಲ್ ಸಂಖ್ಯೆ ಹಾಗೂ ಡೆಸ್ಕ್ ಮೇಲಿರುವ ಸಂಖ್ಯೆಯನ್ನು ಕಡ್ಡಾಯವಾಗಿ ತಾಳೆ ನೋಡಿದ ನಂತರವೇ ಸರಿಯಾದ ಒಎಂಆರ್ ನೀಡಬೇಕು. ಪರೀಕ್ಷೆಯ ಆತಂಕದಲ್ಲಿ ಅಭ್ಯರ್ಥಿಗಳು ತಮ್ಮ ವಿವರ ಸರಿ ಇದೆ ಎಂದು ಗೊಂದಲದಲ್ಲೇ ಸಹಿ ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಮೇಲ್ವಿಚಾರಕರೇ ಅಭ್ಯರ್ಥಿಯ ಮುಖ ಮತ್ತು ಹಾಲ್ ಟಿಕೆಟ್ ವಿವರಗಳನ್ನು ಖಚಿತಪಡಿಸಿಕೊಳ್ಳುವುದು ಕಡ್ಡಾಯ ಎಂದು ನಿರ್ದೇಶನ ನೀಡಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಬಿಸಿಲು ಹೆಚ್ಚಿರುವ ಕಾರಣ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಓಆರ್‍ಎಸ್ ವ್ಯವಸ್ಥೆ ಹಾಗೂ ತುರ್ತು ಚಿಕಿತ್ಸೆಗಾಗಿ ಸಿಬ್ಬಂದಿ ನಿಯೋಜನೆ ಮಾಡಬೇಕು. ಪರೀಕ್ಷೆಗೆ ಬರುವ ಅಭ್ಯರ್ಥಿಗಳ ಫೇಶಿಯಲ್ ರೆಗ್ನೇನೇಷನ್ ಮಾಡಲು ವ್ಯವಸ್ಥೆ ಮಾಡಿಕೊಳ್ಳುವಂತೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಿಗೆ ಸೂಚನೆ ನೀಡಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಜಿಲ್ಲಾ ಪಂಚಾಯತ್ ಕಚೇರಿಯಿಂದಲೇ ನೇರ ವೆಬ್‍ಕಾಸ್ಟಿಂಗ್  ವೀಕ್ಷಣೆ ನಡೆಸಲಾಗುವುದು. ಅಕ್ಟೋಬರ್ 01ರಂದು ಎಲ್ಲಾ ಕೇಂದ್ರಗಳಲ್ಲಿ ಟ್ರಯಲ್ ರನ್ ನಡೆಸಲು ಸೂಚನೆ ನೀಡಿದ ಅವರು, ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗೋಡೆ ಗಡಿಯಾರ, ಕುಡಿಯುವ ನೀರು, ಶೌಚಾಲಯ ಹಾಗೂ ಸರಿಯಾದ ಸಮಯಕ್ಕೆ ಬೆಲ್ ಬಾರಿಸುವ ಸೌಲಭ್ಯ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now