ದಾವಣಗೆರೆ ದಕ್ಷಿಣ ಉಪಚುನಾವಣೆಯ ನಂತರ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದಲ್ಲಿ ಭಿನ್ನಮತ ಮತ್ತು ಬಣ ರಾಜಕೀಯ ತಾರಕಕ್ಕೇರಿದೆ. ಈ ಬೆಳವಣಿಗೆಯ ಮಧ್ಯೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿದ್ದ ಅಬ್ದುಲ್ ಜಬ್ಬರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅದನ್ನು ಅಂಗೀಕರಿಸಿದ್ದಾರೆ. ಜೊತೆಗೆ ರಾಜ್ಯ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿ ಆದೇಶ ಹೊರಡಿಸಲಾಗಿದೆ.
ಜಬ್ಬಾರ್ ರಾಜೀನಾಮೆ ಬಳಿಕ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಸಿರಾಜ್ ಸೇರಿದಂತೆ ಕಾರ್ಯದರ್ಶಿಗಳಾದ ಅಬ್ದುಲ್ ಗನಿ ತಾಹೀರ್, ನೂರ್ ಅಹ್ಮದ್ ಮತ್ತು ಹುಸೇನ್ ಉಕ್ಕಡಗಾತ್ರಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಪಕ್ಷದೊಳಗಿನ ಅಶಿಸ್ತಿನ ವಿಚಾರ ಗಂಭೀರ ರೂಪ ಪಡೆದಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆಯ ಮೇರೆಗೆ ಡಿಕೆ ಶಿವಕುಮಾರ್ ಇಡೀ ಘಟಕವನ್ನೇ ವಿಸರ್ಜಿಸುವ ಮೂಲಕ ಕಠಿಣ ಕ್ರಮ ಕೈಗೊಂಡಿದ್ದಾರೆ.ಇದರ ಜೊತೆಗೆ, ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸದ ನಾಯಕರ ವಿರುದ್ಧವೂ ಶಿಸ್ತುಕ್ರಮ ಕೈಗೊಳ್ಳಲು ಹೈಕಮಾಂಡ್ ಮುಂದಾಗಿದೆ. ಸಚಿವ ಜಮೀರ್ ಅವರು ಪ್ರಚಾರದಿಂದ ದೂರ ಉಳಿದಿದ್ದಲ್ಲದೇ ಇತರೆ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ ಆರೋಪ ಎದುರಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ.

ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದ್ದು, ಸಮರ್ಥ್ ಅವರಿಗೆ ಟಿಕೆಟ್ ಘೋಷಣೆಯಾದ ಬಳಿಕ ಜಮೀರ್ ಅಹಮದ್ ಹಾಗೂ ಅಬ್ದುಲ್ ಜಬ್ಬಾರ್ ಪ್ರಚಾರದಿಂದ ದೂರ ಉಳಿದಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ರಿಜವಾನ್ ಮತ್ತು ವಿಧಾನ ಪರಿಷತ್ ಸದಸ್ಯ ಸಲೀಮ್ ಪಕ್ಷದ ಹಿರಿಯ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದರು.
ಉಪಚುನಾವಣೆ ವೇಳೆ ನಡೆದ ಆಂತರಿಕ ಬೆಳವಣಿಗೆಗಳ ಕುರಿತು ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ಹೈಕಮಾಂಡ್‌ಗೆ ಸಮಗ್ರ ವರದಿ ಸಲ್ಲಿಸಿದ್ದು, ಅದರಲ್ಲಿ ಜಮೀರ್ ಅಹಮದ್, ಅವರ ಆಪ್ತ ವಲಯದ ನಾಯಕರ ನಡೆಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಈ ಎಲ್ಲಾ ಬೆಳವಣಿಗೆಗಳು ಕಾಂಗ್ರೆಸ್ ಪಕ್ಷದೊಳಗಿನ ಬಣ ರಾಜಕೀಯವನ್ನು ಬಯಲಿಗೆಳೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವಿನ ಸಂಘರ್ಷಕ್ಕೂ ಕಾರಣವಾಗಿವೆ. ಪಕ್ಷದ ಒಳರಾಜಕೀಯ ತೀವ್ರಗೊಳ್ಳುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳವಣಿಗೆಗಳು ಸಂಭವಿಸುವ ಸಾಧ್ಯತೆ ಇದೆ.












