ಹಿರಿಯೂರು: ಚಿತ್ರದುರ್ಗ ಜಿಲ್ಲೆಯಾದ್ಯಂತ ಪ್ರಚಾರ ಕಾರ್ಯ ಶುರು ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ತಮ್ಮ ಅಭ್ಯರ್ಥಿ ಪರ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನೀರಾವರಿ ಸಚಿವರಾಗಿ ಉತ್ತಮ ಆಡಳಿತ ನಡೆಸಿಕೊಟ್ಟಿರುವ ದಿಮಂತ ನಾಯಕ ಗೋವಿಂದ ಕಾರಜೋಳ ಅವರನ್ನು 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕರೆ ನೀಡಿದರು.
ನಗರದ ತಾಹಾ ಪ್ಯಾಲೇಸ್ ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಮನ್ವಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಬೂಟಾಟಿಕೆ ನಡೆಯುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಹೆಸರು ಹೇಳಲು ಸಾಧ್ಯವಿಲ್ಲದ ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ.
ನಾನು ಸಿಎಂ ಆಗಿದ್ದಾಗ 4 ಸಾವಿರ ರೈತರಿಗೆ ಹಣ ಕೊಡಲಾಯಿತು. ಕೇಂದ್ರದಿಂದ 6 ಸಾವಿರ ಕೊಡಲಾಯಿತು. ಇದೀಗ ಕಾಂಗ್ರೆಸ್ ಪಕ್ಷ ಅದನ್ನು ನಿಲ್ಲಿಸಿಕೊಂಡು ರೈತರ ಜೊತೆ ಚೆಲ್ಲಾಟವಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಇದೆ ವೇಳೆ ಮಾಜಿ ಶಾಸಕ ಜಿಹೆಚ್ ತಿಪ್ಪಾರೆಡ್ಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 80 ಕೋಟಿ ಜನರಿಗೆ ಅಕ್ಕಿ ಕೊಡಲಾಗುತ್ತಿದೆ. ಇದನ್ನು ಕಾಂಗ್ರೆಸ್ ನವರು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆದ ಯುದ್ದದಲ್ಲಿ ಅವರೊಂದಿಗೆ ಮಾತನಾಡಿ ಅಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲಾಯಿತು. ಪ್ರಧಾನಿ ಮೋದಿಯವರು ರೈತರಿಗೆ ಫಸಲು ಭೀಮಾ ಯೋಜನೆಯನ್ನು ಜಾರಿಗೆ ತರುವ ಮೂಲಕ ರೈತರ ಬದುಕಿಗೆ ದಾರಿದೀಪವಾದರು. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಒಂದಾಗಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಮೈತ್ರಿ ಪಕ್ಷದ ಗೆಲುವಿಗೆ ಒಗ್ಗಾಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಕರೆ ನೀಡಿದರು.
ಶಾಸಕ ಭೈರತಿ ಬಸವರಾಜ್ ಮಾತನಾಡಿ ಮೈತ್ರಿ ಪಕ್ಷದ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಬೇಕು ಎಂದರು. ಜಿಲ್ಲೆಯ ಅಭಿವೃದ್ಧಿ ಹಾಗೂ ನೀರಾವರಿ ಅಭಿವೃದ್ಧಿಗಾಗಿ ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡಬೇಕು. ಕೋವಿಡ್ ಸಂಧರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಮಗೆ ಲಸಿಕೆ ನೀಡುವ ಮೂಲಕ ಪ್ರಾಣ ಉಳಿಸಿದ್ದಾರೆ. ಅವರ ಋಣವನ್ನು ತೀರಿಸಿಬೇಕು ಎಂದು ಹೇಳಿದರು.