ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಆ. 02): ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯ್ ಅವರು ಬುಧವಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವರ ಯೋಗಕ್ಷೇಮ ವಿಚಾರಿಸಿದರು.
ಜಿಲ್ಲಾಸ್ಪತ್ರೆಯ ಮಕ್ಕಳ ವಿಭಾಗ, ತುರ್ತು ಚಿಕಿತ್ಸಾ ವಿಭಾಗದ ಘಟಕಗಳಿಗೆ ತೆರಳಿ ಮಾಹಿತಿ ಪಡೆದ ಅವರು, ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು. ಘಟನೆಯಲ್ಲಿ ಮೃತಪಟ್ಟ ಮಂಜುಳಾ ಅವರಿಗೆ ಇಬ್ಬರು ಮಕ್ಕಳಿದ್ದು, ಅವರಿಗೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ಅಗತ್ಯ ನೆರವು ನೀಡಲಾಗುವುದು. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನೂ ತಲುಪಿಸಲಾಗುವುದು ಎಂದರು.
ಜೀವಿಸುವ ಹಕ್ಕು ಸಂವಿಧಾನಾತ್ಮಕವಾಗಿ ಎಲ್ಲರಿಗೂ ಲಭಿಸಿದೆ. ಶುದ್ಧ ಕುಡಿಯುವ ನೀರು ಪಡೆಯುವುದು ಎಲ್ಲರ ಹಕ್ಕು. ತಕ್ಷಣವೇ ಕವಾಡಿಗರ ಹಟ್ಟಿಯಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ನಗರಸಭೆಗೆ ನಿರ್ದೇಶನ ನೀಡಿದ್ದೇನೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಘಟನೆಯಲ್ಲಿ ಬಾಧಿತರಾದವರಿಗೆ ಸೂಕ್ತ ಕಾನೂನಿನ ನೆರವು ಸಹ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಭಾಕರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸವರಾಜ, ವೈದ್ಯಾಧಿಕಾರಿ ಆನಂದ ಪ್ರಕಾಶ್, ಶುಶ್ರೂಷಕ ಮಲ್ಲಣ್ಣ ಸೇರಿದಂತೆ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಇದ್ದರು.