ಶಿವಮೊಗ್ಗ.ಸೆಪ್ಟೆಂಬರ್.25: ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 2,10,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಶಿವಮೊಗ್ಗದ ಟಿಪ್ಪು ನಗರ 6ನೇ ಕ್ರಾಸ್ ನಿವಾಸಿ ಅಬ್ದುಲ್ ಶೋಹೇಬ್ ಉರ್ಫ್ ಬಿಡಿ ಶಿಕ್ಷೆಗೆ ಗುರಿಯಾದ ಆರೋಪಿ. ಆರೋಪಿ ಅಬ್ದುಲ್ ಶೋಹೇಬ್ ತಾನು ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಕೌಸರ್ ಫಿಸಾಳ ಚಾರಿತ್ರ್ಯದ ಬಗ್ಗೆ ಅನುಮಾನಪಟ್ಟು, ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕು, ಮಚ್ಚು ಮತ್ತು ಕಲ್ಲುಗಳಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದ. ಈ ಸಂಬಂಧ ಮೃತರ ತಾಯಿ ನೀಡಿದ ದೂರಿನನ್ವಯ ತುಂಗಾನಗರ ಪೊಲೀಸ್ ಠಾಣೆಯಲ್ಲಿ (ಗುನ್ನೆ ಸಂಖ್ಯೆ: 341/2021) ಪ್ರಕರಣ ದಾಖಲಾಗಿತ್ತು.
ಅಂದಿನ ತನಿಖಾಧಿಕಾರಿಗಳಾದ ಪೊಲೀಸ್ ಇನ್‌ಸ್ಪೆಕ್ಟರ್ ಎಂ.ಎಸ್. ದೀಪಕ್ ಮತ್ತು ಮಂಜುನಾಥ್ ಅವರು ತನಿಖೆ ನಡೆಸಿ, ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಕಲಂ 498(ಎ) ಮತ್ತು 302 ರ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದರು.
ನ್ಯಾಯಾಲಯದ ತೀರ್ಪು
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀಮತಿ ಪ್ರೀತಿ ಕೆ.ಪಿ. ಅವರು, ಆರೋಪಿಯ ಮೇಲಿನ ಅಪರಾಧ ದೃಢಪಟ್ಟ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 23. ರಂದು ತೀರ್ಪು ಪ್ರಕಟಿಸಿದ್ದಾರೆ. IPC ಕಲಂ 498(ಎ) ಹಾಗೂ 302 ರ ಅಡಿಯಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು ರೂ.2,10,000/- ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ ಕಾರಾಗೃಹ ವಾಸದ ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಪುಷ್ಪ ಪಿ.ಓ. ಅವರು ವಾದ ಮಂಡಿಸಿದ್ದರು. ತನಿಖೆಗೆ ಪೊಲೀಸ್ ಸಿಬ್ಬಂದಿಯಾದ ಸಿ.ಹೆಚ್.ಸಿ ಕಿರಣ್‌ಕುಮಾರ್, ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ಗಳಾದ ಪ್ರಮೀಳಾ ಮತ್ತು ಭಾಗ್ಯ ಅವರು ಸಹಕರಿಸಿದ್ದರು









